ಮೊಬೈಲ್‍ನಲ್ಲಿ ಹೆಚ್ಚು ಮಾತನಾಡಬೇಡ ಎಂದು ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

ಬೆಂಗಳೂರು, ಮಾ.20: ಕ್ಷುಲ್ಲಕ ವಿಚಾರಕ್ಕೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಾ(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ಪೊಲೀಸರು ಗುರುತಿಸಿದ್ದಾರೆ.
ಯುವತಿ ಹೆಚ್ಚಾಗಿ ಫೋನ್‍ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ ತಾಯಿ ಮೊಬೈಲ್‍ನಲ್ಲಿ ಹೆಚ್ಚು ಮಾತನಾಡಬೇಡ ಎಂದು ಬುದ್ಧಿವಾದ ಹೇಳಿ ಗದರಿಸಿದ್ದರು. ಇದರಿಂದ ತಾಯಿಗೆ ಹೆದರಿಸಬೇಕು ಎಂದುಕೊಂಡು ಸ್ನೇಹಾ ಮಾ.3 ರಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





