ಮಾಸ್ಕ್ ಧರಿಸಲು ಒತ್ತಾಯಿಸಿ ಸ್ವತಃ ರಸ್ತೆಗಿಳಿದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಮಾ. 22: ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸ್ವತಃ ರಸ್ತೆಗೆ ಇಳಿದು ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಸೋಮವಾರ ಮನವಿ ಮಾಡಿದರು.
ಕೋವಿಡ್ ಮಾರ್ಗಸೂಚಿಯನ್ವಯ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ಮಾ.15ರಂದು ದ.ಕ. ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದರು. ಆದಾಗ್ಯೂ ಸಾರ್ವಜನಿಕರು ಮಾಸ್ಕ್ ಧರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬೇಸತ್ತ ಜಿಲ್ಲಾಧಿಕಾರಿ ಮಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸಿದರು.
ಬಸ್ ಪ್ರಯಾಣಿಕರು ಮಾಸ್ಕ್ ಧರಿಸದೇ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಸ್‌ನೊಳಗೆ ಪ್ರವೇಶಿಸಿ ಮಾಸ್ಕ್ ಧರಿಸುವಂತೆ ಸೂಚಿಸಿದರು. ಈ ವೇಳೆ ಮಾಸ್ಕ್ ಧರಿಸದ ಪ್ರಯಾಣಿಕರು ಗಲಿಬಿಲಿಗೊಂಡರು. ಈ ವೇಳೆ ಜಿಲ್ಲಾಧಿಕಾರಿಯು ಮಾಸ್ಕ್ ಧರಿಸುವ ಬಗ್ಗೆ ಜನಜಾಗೃತಿ ಮೂಡಿಸಿದರು. ಮಾಸ್ಕ್ ಧರಿಸದ ಪ್ರಮಾಣಿಕರು, ಸಾರ್ವಜನಿಕರಿಂದ ಸ್ಥಳದಲ್ಲೇ ದಂಡ ವಸೂಲಿ ಮಾಡಲಾಯಿತು ಎಂದು ತಿಳಿದುಬಂದಿದೆ.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಸ್ವಯಂ ಮೇಲ್ವಿಚಾರಣೆ ನಡೆಸಿಕೊಂಡು ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪ್ರತಿಯೊಬ್ಬ ನಾಗರಿಕರು ತಪ್ಪದೇ ಮಾಸ್ಕ್ ಧರಿಸಿಕೊಳ್ಳುವುದರೊಂದಿಗೆ ಸುರಕ್ಷಿತ ಅಂತರ ಕಾಯ್ದುಕೊಂಡು ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.








