ಡಾ.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜಯಂತಿಗೆ ಪೂರ್ವಭಾವಿ ಸಭೆ

ಉಡುಪಿ, ಮಾ.27: ಮುಂದಿನ ಎ.5ರಂದು ನಡೆಯುವ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಜಯಂತಿ ಹಾಗೂ ಎ.14ರಂದು ನಡೆಯುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ನಿಗದಿತ ಜನರನ್ನು ಆಹ್ವಾನಿಸಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾಲಂಕಾರ ಮಾಡಲು ಹಾಗೂ ಸಮಾಜ ಕಲ್ಯಾಣ ಇಲಾಖೆ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಲು ಅಗತ್ಯ ಕ್ರಮ ಕೈ ಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಉಡುಪಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.








