ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ಮತ್ತೆ ಕಾಂಗ್ರೆಸ್ ಸೇರ್ಪಡೆ?

ಉಡುಪಿ, ಮಾ.28: ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್ ಪಕ್ಷ ತೊರೆದಿದ್ದ ಯುವ ಮುಖಂಡ ಅಮೃತ್ ಶೆಣೈ ಇದೀಗ ಮತ್ತೆ ಮಾತೃಪಕ್ಷ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಈ ಬಗ್ಗೆ ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿರುವ ಅಮೃತ್ ಶೆಣೈ, ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಈಗಾಗಲೇ ನಿರ್ಧಾರ ಮಾಡಿದ್ದೇನೆ. ಅಧಿಕೃತವಾಗಿ ಸ್ವಲ್ಪ ದಿನಗಳಲ್ಲಿ ಈ ವಿಚಾರವನ್ನು ಪ್ರಕಟಿಸುತ್ತೇನೆ ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ -ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟ ವಿಚಾರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಮೃತ್ ಶೆಣೈ, ಆ ಬಳಿಕ ಪಕ್ಷವನ್ನು ತ್ಯಜಿಸಿದ್ದರು. ಎಐಸಿಸಿ ಸದಸ್ಯರಾಗಿದ್ದ ಅವರು, ನಂತರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದೀಗ ಈ ಪಕ್ಷದಲ್ಲಿ ರಾಜ್ಯ ಉಪಾಧ್ಯಕ್ಷರಾಗಿರುವ ಇವರು ಕಳೆದ ಕೆಲವು ತಿಂಗಳಿನಿಂದ ತಟಸ್ಥರಾಗಿ ಉಳಿದುಕೊಂಡಿದ್ದರು. ಈ ಮಧ್ಯೆ ಅಮೃತ್ ಶೆಣೈ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದ ಗಳು ಹರಡುತ್ತಿವೆ. ಈ ವಿಚಾರವಾಗಿ ಕಾಂಗ್ರೆಸ್ ಮುಖಂಡರು ಮತ್ತು ಅಮೃತ್ ಶೆಣೈ ಮಧ್ಯೆ ಮಾತುಕತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.





