ಕೊರೋನ ಭೀತಿ ; ದ.ಕ. ಜಿಲ್ಲೆಯಾದ್ಯಂತ 144(3) ಸೆಕ್ಷನ್ ಜಾರಿ: ಡಿಸಿ ಡಾ. ರಾಜೇಂದ್ರ
ಧಾರ್ಮಿಕ ಸಮಾರಂಭ, ಸಾರ್ವಜನಿಕ ಸಭೆಗಳಿಗೆ ನಿಷೇಧಾಜ್ಞೆ

ಮಂಗಳೂರು : ಕೊರೋನ ವೈರಸ್ ಸೋಂಕು 2ನೇ ಅಲೆ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಇದು ಮಾತ್ರವಲ್ಲದೆ ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನ ವೈರಸ್ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್ 29 ರಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.









