ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ ವರದಿ ಸಲ್ಲಿಸದಿದ್ದರೆ ಕ್ರಮ: ಡಿಸಿಗಳಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು, ಮಾ.30: ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ ವರದಿ ಸಲ್ಲಿಸಲು ವಿಳಂಬ ಮಾಡಿದರೆ ಡಿಸಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಹೈಕೋರ್ಟ್, ಕೂಡಲೇ ಅನಧಿಕೃತ ಧಾರ್ಮಿಕ ಕೇಂದ್ರಗಳ ಸರ್ವೇ ವರದಿ ಹಾಗೂ ಅವುಗಳನ್ನು ತೆರವು ಮಾಡುವ ಕ್ರಿಯಾ ಯೋಜನೆ ಸಲ್ಲಿಸುವಂತೆ ಸರಕಾರಕ್ಕೆ ತಾಕೀತು ಮಾಡಿದೆ.
ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ನಡೆಸಿರುವ ಸರ್ವೇ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಸರಕಾರ ಹಾಗೂ ಪಾಲಿಕೆ ಪರ ವಕೀಲರು ಮನವಿ ಮಾಡಿದರೆ, ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ವರದಿ ಸಲ್ಲಿಕೆಗೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿತು.
ಇನ್ನೊಂದು ವಾರದಲ್ಲಿ ವರದಿ ನೀಡದಿದ್ದರೆ ಜಿಲ್ಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಮೌಖಿಕ ಎಚ್ಚರಿಕೆ ನೀಡಿ, ಎಪ್ರಿಲ್ 15ರೊಳಗೆ ವರದಿ ಸಲ್ಲಿಸಲು ಕೊನೆಯ ಅವಕಾಶ ನೀಡಿತು. ಹಾಗೆಯೇ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆಯನ್ನೂ ಸಿದ್ದಪಡಿಸಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿ, ಎಪ್ರಿಲ್ 17ಕ್ಕೆ ವಿಚಾರಣೆ ಮುಂದೂಡಿತು.







