ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು: ಲಖನ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ

ಬೆಂಗಳೂರು, ಎ. 1: ‘ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು' ಎಂದು ಗೋಕಾಕ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ಲಖನ್ ಜಾರಕಿಹೊಳಿ ಇಂದಿಲ್ಲಿ ಆಗ್ರಹಿಸಿದ್ದಾರೆ.
ಗುರುವಾರ ಗೋಕಾಕ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಯುವತಿಯ ಕುಟುಂಬದ ಸದಸ್ಯರು ನೇರವಾಗಿಯೇ ಆರೋಪ ಮಾಡಿದ್ದಾರೆ. ಹೀಗಾಗಿ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಈ ಸಂಬಂಧ ಪಕ್ಷದ ಹೈಕಮಾಂಡ್ ವಿಚಾರ ಮಾಡಬೇಕು ಎಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡದಿದ್ದರೆ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರವಾಗಲಿದೆ ಎಂದು ಎಚ್ಚರಿಸಿದ ಅವರು, ಈ ವಿಚಾರ ಉಪ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಲಖನ್ ಜಾರಕಿಹೊಳಿ ತಿಳಿಸಿದರು.







