ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು, ಎ.4: ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ನ್ಯಾಯಪೀಠ, ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ನಡೆಸುವಂತೆ ಮಾ.21ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಅಮಾನತುಗೊಳಿಸಿ, ವಿಚಾರಣೆಗೆ ತಡೆಯಾಜ್ಞೆ ನೀಡಿತು.
ಯಡಿಯೂರಪ್ಪ ಮೊದಲ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ವೇಳೆ 24 ಎಕರೆ ಸರಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
2012ರಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಚಾರ್ಜ್‍ಶೀಟ್‍ನ ಆಧಾರದ ಮೇಲೆ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುವಂತೆ ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು. ಹೀಗಾಗಿ ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಆದರೆ, ಯಡಿಯೂರಪ್ಪ ಈ ತನಿಖೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಸೋಮವಾರ ಬಿಎಸ್‍ವೈ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿದೆ.
ಬಿಎಸ್‍ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ನಗರದ ವಿಶೇಷ ಕೋರ್ಟ್ ಕೈಬಿಟ್ಟಿರುವುದನ್ನು ಪ್ರಶ್ನಿಸಿ ನಗರದ ಉದ್ಯಮಿ ಆಲಂ ಪಾಷಾ ಹೈಕೋರ್ಟ್ ಮೆಟ್ಟಿಲೇರಿದ್ದರು.







