ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಡಿಸಿಎಂ ಡಾ. ಅಶ್ವತ್ಥನಾರಾಯಣ

ಡಾ. ಅಶ್ವತ್ಥನಾರಾಯಣ (File Photo)
ಮಂಗಳೂರು, ಎ.9: ರಾಜ್ಯ ಸರಕಾರವು ಸಾರಿಗೆ ನೌಕರರ 8 ಪ್ರಮುಖ ಬೇಡಿಕೆಗಳನ್ನು ಈಡೇರಿಸಿದೆ. ಆದರೆ ಆರನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತವಾದ ವೇತನವನ್ನು ಸರಕಾರ ನೀಡಲು ಸಿದ್ದವಿದೆ. ಕೋವಿಡ್ ಅವಧಿಯಲ್ಲಿ ಸರಕಾರ ಕೆಎಸ್ಸಾರ್ಟಿಸಿಗೆ 1200 ಕೋ.ರೂ. ಸಹಾಯಧನ ನೀಡಿದೆ. ಅಲ್ಲದೆ ಸಾರಿಗೆ ನೌಕರರ ಹಿತಕ್ಕೆ ಸರಕಾರ ಕಟಿಬದ್ಧವಾಗಿದೆ ಎಂದರು.
ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ಎ.10ರಿಂದ ರಾತ್ರಿ ಕರ್ಪ್ಯೂ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಜನರ ಓಡಾಟ ನಿಯಂತ್ರಿಸಿ ಕೊರೋನ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಸರಕಾರದ ಉದ್ದೇಶವಾಗಿದೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಡಾ. ಸಿ.ಎನ್. ಅಶ್ವಥನಾರಾಯಣ್ ಮನವಿ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನಡುವಿನ ಭಿನ್ನಾಭಿಪ್ರಾಯ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಇಬ್ಬರ ನಡುವೆ ಯಾವುದೇ ಅಭಿಪ್ರಾಯ ಬೇಧ ಇಲ್ಲ. ಬಿಜೆಪಿಯಲ್ಲಿ ಅಶಿಸ್ತು, ಭಿನ್ನಾಭಿಪ್ರಾಯಕ್ಕೆ ಯಾವುದೇ ಅವಕಾಶ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉತ್ತರಿಸಿದರು.
ಈ ಸಂದರ್ಭ ಶಾಸಕ ರಾಜೇಶ್ ನಾಕ್, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ಉಪಸ್ಥಿತರಿದ್ದರು.







