ದ.ಕ.ಜಿಲ್ಲೆ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಚಿವ ಕೋಟ ಸೂಚನೆ

ಮಂಗಳೂರು, ಎ.16: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನೂ ಪರೀಕ್ಷೆಗೆ ಒಳಪಡಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೋನ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ ಉಡುಪಿಯ ಖಾಸಗಿ ಆಸ್ಪತ್ರೆಯಿಂದ ವೀಡಿಯೋ ಕಾನ್ಫ್‌ರೆನ್ಸ್ ಮೂಲಕ ಶುಕ್ರವಾರ ದ.ಕ.ಜಿಲ್ಲಾಧಿಕಾರಿ ಸಹಿತ ಇತರ ಅಧಿಕಾರಿಗಳ ಜೊತೆ ಕೊರೋನ ನಿಯಂತ್ರಣ ಕ್ರಮಗಳ ಸಹಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಜಿಲ್ಲೆಯಲ್ಲಿ ಎರಡನೇ ಅಲೆಯ ಆತಂಕ ಉಂಟುಮಾಡಿದೆ. ಇದರ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸಲು ಮುಂದಾಗಬೇಕು ಎಂದು ಸಚಿವರು ಹೇಳಿದರು.
ಸಾರ್ವಜನಿಕರು ಕೋವಿಡ್ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು, ಸ್ಯಾನಿಟೈಸರ್‌ಗಳ ಬಳಕೆ ಸಹಿತ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಸಚಿವ ಕೋಟಾ ಮಾಲ್‌ಗಳಲ್ಲಿ ಪೆಟ್ರೋಲ್ ಬಂಕ್ ಸಹಿತ ವಾಣಿಜ್ಯ ಚಟುವಟಿಕೆದಾರರು ಗ್ರಾಹಕರಿಗೆ ಕೊರೋನ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರಿಸಬೇಕು. ರಾತ್ರಿ ಕರ್ಫ್ಯೂ ನಿಯಮಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೇರಳ ಗಡಿಯಲ್ಲಿ ಕೊರೋನ ನೆಗೆಟಿವ್ ವರದಿ, ತಪಾಸಣೆ ಮತ್ತಿತರ ನಿಯಂತ್ರಣ ಕ್ರಮಳನ್ನು ಬಿಗಿಗೊಳಿಸಬೇಕು ಎಂದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮೇಲುಸ್ತುವಾರಿಗಳನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ, ಅವರ ಆರೋಗ್ಯವನ್ನು ತಪ್ಪದೆ ವಿಚಾರಿಸಿ, ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದರು.
ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4,978 ಹಾಸಿಗೆಗಳಿವೆ. ಆದರೂ ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ, ವೆಂಟಿಲೇಟರ್, ಆಕ್ಸಿಜನ್‌ನ ಲಭ್ಯತೆಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಕೋವಿಡ್ ಚಿಕಿತ್ಸೆ ಪಡೆಯಲು ಅನೂಕೂಲವಾಗುವಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಸಚಿವ ಕೋಟ ಸೂಚಿಸಿದರು.
ಕೊರೋನ ಚಿಕಿತ್ಸೆಗೆ ಪೂರಕವಾಗಿರುವ ರೆಮ್‌ಡಿಸಿಯರ್ ಮತ್ತಿತರ ಔಷಧಿಗಳು, ಪಿಪಿಇ ಕಿಟ್, ಮಾಸ್ಕ್, ಟೆಸ್ಟಿಂಗ್ ಕಿಟ್ ಸಹಿತ ಅತ್ಯವಶ್ಯಕ ಪರಿಕರಗಳ ದಾಸ್ತಾನುಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.
ಪಾಸಿಟಿವ್ ವರದಿ ಬಂದ ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವ್ಯವಸ್ಥೆಯನ್ನು ಮಾಡಬೇಕೆಂದು ಸೂಚನೆ ನೀಡಿದ ಸಚಿವರು ಡಯಾಲಿಸಿಸ್ ರೋಗಿಗಳೂ ಸೇರಿದಂತೆ ಇತರೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಶುಶ್ರೂಷೆಗೆ ಕೊರತೆ ಉಂಟಾಗಂತೆ ಎಚ್ಚರವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಪಂ ಸಿಇಒ ಡಾ. ಕುಮಾರ್, ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಕೇಶ್ ಭಗವಾನ್, ಅಪರ ಜಿಲ್ಲಾಧಿಕಾರಿ ಎ.ಜೆ. ರೂಪಾ ಮತ್ತಿತರರು ಉಪಸ್ಥಿತರಿದ್ದರು.







