18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಎ. 26: `ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನ ಎಲ್ಲ ನಾಗರಿಕರಿಗೆ ಕೋವಿಡ್ ಸೋಂಕು ನಿಯಂತ್ರಣ ಲಸಿಕೆಯನ್ನು ಕರ್ನಾಟಕ ರಾಜ್ಯದಲ್ಲಿಯೂ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, `45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಕೇಂದ್ರ ಸರಕಾರ ಉಚಿತವಾಗಿ ಲಸಿಕೆ ನೀಡುತ್ತಿದೆ. ಕೋವಿಡ್-19 ಸೋಂಕು ಹಬ್ಬುವುದನ್ನು ತಡೆಗಟ್ಟಲು ಎಲ್ಲ ಜನರೂ ಕೊರೋನ ಲಸಿಕೆ ಪಡೆದುಕೊಳ್ಳಬೇಕು' ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಮೇ 1ರಿಂದ ರಾಜ್ಯಾದ್ಯಂತ ಎಲ್ಲ ಸರಕಾರಿ ಲಸಿಕಾ ಕೇಂದ್ರಗಳಲ್ಲಿ 18 ರಿಂದ 44 ವರ್ಷದೊಳಗಿನ ನಾಗರಿಕರಿಗೆ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಎ.28ರಿಂದ ಲಸಿಕೆ ಪಡೆದುಕೊಳ್ಳಲು ಎಲ್ಲ ನಾಗರಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. 45 ಮೇಲ್ಪಟ್ಟವರಿಗೆ ಕೇಂದ್ರ ಸರಕಾರದ ಉಚಿತ ಲಸಿಕಾ ಅಭಿಯಾನ ಮುಂದುವರಿಯಲಿದೆ' ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
ಕೋವಿಡ್ ಸೋಂಕು ತಡೆಗಟ್ಟಲು ಎಲ್ಲ ನಾಗರಿಕರು ತಪ್ಪದೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಯಾನಿಟೈಸರ್ ಬಳಿಕೆ ಮಾಡಬೇಕು. ಅಲ್ಲದೆ ಮಾರ್ಗಸೂಚಿ ಪಾಲಿಸುವ ಮೂಲಕ ಕೊರೋನ ಮಹಾಮಾರಿ ವಿರುದ್ಧದ ಈ ಸಮರದಲ್ಲಿ ನಾವು ಗೆಲ್ಲಬಹುದು. ಕೋವಿಡ್ ಸೂಕ್ತ ನಡವಳಿಕೆಗಳನ್ನು ರೂಢಿಸಿಕೊಳ್ಳಿ. ಇದು ನಿಮ್ಮ ಹಾಗೂ ನಿಮ್ಮ ಕುಟುಂಬದ ಸುರಕ್ಷತೆಗೆ ಅತ್ಯಗತ್ಯ' ಎಂದು ಯಡಿಯೂರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೃಹ, ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಹಾಜರಿದ್ದರು.
ತಪ್ಪದೆ ನೋಂದಣಿ ಮಾಡಿಸಿ
ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇ 1ರಿಂದ 18ರಿಂದ 44 ವರ್ಷದೊಳಗಿನ ನಾಗರಿಕರಿಗೆ ಎಲ್ಲ ಸರಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಎಲ್ಲ ಅರ್ಹ ವ್ಯಕ್ತಿಗಳು ಎ.28ರಿಂದ ಲಸಿಕೆ ಪಡೆಯಲು ತಪ್ಪದೆ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ'
-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ







