ಅರ್ಹ ಮತದಾರರಿಗೆ ವೇತನ ಸಹಿತ ರಜೆ: ಚುನಾವಣಾ ಆಯೋಗ

ಬೆಂಗಳೂರು, ಎ.26: ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 2 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2 ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಆದೇಶಿಸಿದೆ. ಚುನಾವಣಾ ವೇಳೆ ಪಟ್ಟಿಯಂತೆ ಎ.27ರಂದು ಮತದಾನ ನಡೆಯಲಿದೆ.
ಸಾರ್ವತ್ರಿಕ ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ಮತ ಕ್ಷೇತ್ರಗಳಲ್ಲಿನ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು.
ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಎ.27ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಚುನಾವಣಾ ಆಯೋಗ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.







