ಸರಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ: ಮಾಜಿ ಸಿಎಂ ಸಿದ್ದರಾಮಯ್ಯ
ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟ

ಬೆಂಗಳೂರು, ಎ.30: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಆಶೀರ್ವಾದ ಮಾಡಿರುವ ಮತದಾರರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.
ಕೊರೋನ ಸೋಂಕಿನಿಂದ ಇಡೀ ದೇಶವೇ ಕಷ್ಟ ನಷ್ಟಕ್ಕೀಡಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆ ಮಾಡುವುದು ಬೇಡ. ಈ ಗೆಲುವನ್ನು ಗೆಲುವಾಗಿಯೇ ಸ್ವೀಕರಿಸೋಣ. ಈ ಗೆಲುವು ಮುಂದಿನ ನಮ್ಮ ಹೋರಾಟಗಳಿಗೆ ಸ್ಪೂರ್ತಿಯಾಗಲಿ.
-ಸಿದ್ದರಾಮಯ್ಯ (ಫೇಸ್ಬುಕ್ ಪೋಸ್ಟ್)







