18 ವರ್ಷ ಪ್ರಾಯ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಎನ್‌ಎಸ್‌ಯುಐ ಒತ್ತಾಯ
ಮಂಗಳೂರು. ಮೇ 4: ರಾಜ್ಯದಲ್ಲಿ ಕೊರೋನ ಸೋಂಕು ಹರಡುವುದನ್ನು ತಡೆಗಟ್ಟಲು ಸರಕಾರ 18 ವರ್ಷ ಪ್ರಾಯ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ದ.ಕ. ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸವಾದ್ ಸುಳ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕೊರೋನ 2ನೇ ಅಲೆಗೆ ಯುವಕರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರಕಾರದ ಧೋರಣೆಯೇ ಪ್ರಮುಖ ಕಾರಣ. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿರುವುದು ಯಾಕೆ ಎಂದು ಸವಾದ್ ಪ್ರಶ್ನಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೇ ಸೋಂಕು ತಡೆಗಟ್ಟಲು ಇರುವ ದಾರಿ, ಹೀಗಾಗಿ ರಾಜ್ಯ ಸರಕಾರ ವಿಳಂಬ ಮಾಡದೆ 18 ವರ್ಷ ಮೇಲ್ಲಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ ಅವರು ಈವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೋನ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆಯ ಕೊರತೆ ಇರುವಾಗ ಪ್ರಧಾನಿ ಮೋದಿ ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
Next Story





