ತೇಜಸ್ವಿ ಸೂರ್ಯ, ಮೂವರು ಶಾಸಕರ ವಿರುದ್ಧ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು, ಮೇ 6: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬಿಬಿಎಂಪಿಯ ಬೆಡ್ ಹಂಚಿಕೆ ವ್ಯವಸ್ಥೆಯ ಬಗ್ಗೆ ಮಂಗಳವಾರ ಮಾತನಾಡಿದ್ದರು. ಆದರೆ ಇದರಲ್ಲಿ ಮುಸ್ಲಿಮರ ಹೆಸರನ್ನು ಮಾತ್ರ ಹೇಳುವ ಮೂಲಕ ಕೋಮುವಾದ ಸೃಷ್ಟಿಸುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿದೆ.
ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಸುಳ್ಳು ಹೇಳಿ ಜನರಿಗೆ ತಪ್ಪು ಮಾಹಿತಿ ರವಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಸದ ತೇಜಸ್ವಿ ಸಹಿತ ಮೂವರು ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಹಾಗೂ ಸತೀಶ್ ರೆಡ್ಡಿ ಪ್ರಚಾರಕ್ಕಾಗಿ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಆಧಾರ ರಹಿತ ಹೇಳಿಕೆ ನೀಡಿದ ಇವರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕು. ಇವರು ಬೆಡ್ ದಂಧೆ ಹೆಸರಿನಲ್ಲಿ ಕೋಮುವಾದ ಸೃಷ್ಟಿಸುತ್ತಿದ್ದಾರೆ. ಪ್ರಕರಣ ಸಂಬಂಧ ಶಾಸಕ ಸತೀಶ್ ರೆಡ್ಡಿ ವಿರುದ್ಧ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.





