ರೆಮ್‍ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಮೇ 19: ರೆಮ್‍ಡೆಸಿವಿರ್ ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿರುವ ಹೈಕೋರ್ಟ್, ಜೀವ ಉಳಿಸುವ ಔಷಧಿಗಳನ್ನು ಕಾಳಸಂತೆಯಲ್ಲಿ ಮಾರಾಟ ಆಗುವುದನ್ನು ತಡೆಗಟ್ಟಬೇಕು ಎಂದು ತಿಳಿಸಿದೆ.
ರೆಮ್‍ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದಲ್ಲಿ ಬಂಧನದಲ್ಲಿರುವ ಸೊಹೈಲ್ ಪಾಷಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಜಾಮೀನು ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದ ಅವರಿದ್ದ ನ್ಯಾಯಪೀಠ, ಇವರಿಗೆ ಚುಚ್ಚುಮದ್ದು ಸಿಕ್ಕಿದ್ದು ಎಲ್ಲಿ ಎಂಬುದರ ಕುರಿತು ತನಿಖೆ ನಡೆಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಇನ್ನು ಹೆಚ್ಚಿನ ತನಿಖೆಯ ನಡೆಯಬೇಕಿದೆ. ಈ ರೀತಿಯ ದಂಧೆಯನ್ನು ನಿರ್ಮೂಲನೆ ಮಾಡಬೇಕಾದ ಅಗತ್ಯವಿದೆ ಎಂದು ಪೀಠ ತಿಳಿಸಿದೆ.
ತನಿಖೆಯ ಅಂತಿಮ ವರಿದಿ ಸಲ್ಲಿಕೆಯಾದ ಬಳಿಕ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ತಲಾ 7 ಸಾವಿರಕ್ಕೆ 5 ಚುಚ್ಚುಮದ್ದನ್ನು ಮಾರಾಟ ಮಾಡಿದ ಆರೋಪದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎ.17ರಿಂದ ಸೊಹೈಲ್ ಪಾಷಾ ನ್ಯಾಯಾಂಗ ಬಂಧನದಲ್ಲಿದ್ದಾರೆ.





