''ನೀವು ಶಾಸಕರಾಗಿ ಕೊರೋನಕ್ಕೆ ಸಂಬಂಧಿಸಿದಂತೆ ಎಷ್ಟು ಸಮಸ್ಯೆ ಬಗೆಹರಿಸಿದ್ದೀರಿ ?''
ಆಕ್ಸಿಜನ್ ಕುರಿತು ಅರ್ಜಿ ಸಲ್ಲಿಸಿದ್ದ ಎಚ್.ಕೆ.ಪಾಟೀಲ್‍ಗೆ ಹೈಕೋರ್ಟ್ ತರಾಟೆ

ಬೆಂಗಳೂರು, ಮೇ 21: ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್ ಕೊರತೆ ನೀಗಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ(ಇಸ್ರೋ) ಆಕ್ಸಿಜನ್ ಪಡೆಯಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಮಾಜಿ ಸಚಿವ, ಹಾಲಿ ಶಾಸಕ ಎಚ್.ಕೆ.ಪಾಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಕೊರೋನ ನಿರ್ವಹಣೆ ವಿಚಾರವಾಗಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನಡೆಸಿತು.
ಕೋವಿಡ್‍ಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ಹೈಕೋರ್ಟ್, ರಾಜಕೀಯ ವ್ಯಕ್ತಿಗಳು ಅರ್ಜಿ ಸಲ್ಲಿಸುತ್ತಿರುವುದು ಅಚ್ಚರಿ ತಂದಿದೆ. ಕಳೆದ ಒಂದು ವರ್ಷದಿಂದ ಕೋವಿಡ್ ವಿಚಾರದ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿವಿಧ ಸಂದರ್ಭಗಳಲ್ಲಿ ಅನೇಕ ವಿಷಯಗಳ ಬಗ್ಗೆ 800ಕ್ಕೂ ಹೆಚ್ಚು ಪುಟಗಳ ನಿರ್ದೇಶನ ನೀಡಲಾಗಿದೆ. ಈವರೆಗೆ ಯಾರೊಬ್ಬ ರಾಜಕೀಯ ವ್ಯಕ್ತಿ ಜನರ ಸಮಸ್ಯೆಗಳನ್ನು ಇಟ್ಟುಕೊಂಡು ಕೋರ್ಟ್‍ಗೆ ಬಂದಿಲ್ಲ. ಈಗ ಏಕಾಏಕಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ತಿಳಿಸಿತು.
ಮೊದಲಿಗೆ ಎಚ್.ಕೆ.ಪಾಟೀಲ್ ಅವರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠ, ನೀವು ಶಾಸಕರಾಗಿದ್ದುಕೊಂಡು ಕೊರೋನಕ್ಕೆ ಸಂಬಂಧಿಸಿದಂತೆ ಎಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೀರಿ. ಇಸ್ರೋದಿಂದ ಆಕ್ಸಿಜನ್ ಪಡೆಯಲು ನಿರ್ದೇಶಿಸುವಂತೆ ಮನವಿ ಮಾಡಿದ್ದೀರಿ. ಮತ್ತೊಬ್ಬರಿಗೆ ಹೇಳುವ ಮುನ್ನ ನಿಮ್ಮ ಕೊಡುಗೆ ಏನೆಂದು ತಿಳಿಸಿ. ಒಂದಾದರೂ ಆಕ್ಸಿಜನ್ ಘಟಕ ಸ್ಥಾಪನೆ ಮಾಡಿದ್ದೀರಾ ಎಂದು ಪ್ರಶ್ನಿಸಿತು. ಜೊತೆಗೆ, ಪಬ್ಲಿಸಿಟಿಗಾಗಿ ಹಾಕಿರುವ ಅರ್ಜಿ ಇದಾಗಿದೆ. ದಂಡ ವಿಧಿಸಿ ಅರ್ಜಿ ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ನಿರ್ಧಾರ ತಿಳಿಸಲು ಸೂಚನೆ ನೀಡಿತು.
ಎಚ್.ಕೆ.ಪಾಟೀಲ್ ಪರ ವಕೀಲರು ಅರ್ಜಿ ಹಿಂಪಡೆಯುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.
ಬಾಗಲಕೋಟೆ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಸೇರಿ ಹಲವು ಮನವಿಗಳನ್ನು ಕೋರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಹಾಗೂ ಶಾಸಕ ಕೆ.ಆರ್.ರಮೇಶ್‍ಕುಮಾರ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಇದೇ ವೇಳೆ ಹೈಕೋರ್ಟ್ ಇತ್ಯರ್ಥಪಡಿಸಿತು.







