ಕೋವಿಡ್ ನಿಯಂತ್ರಣಕ್ಕೆ ಬಾರದಿದ್ದಲ್ಲಿ ಎಸೆಸೆಲ್ಸಿ ಪರೀಕ್ಷೆಯೂ ರದ್ದು: ಸಿಎಂ ಯಡಿಯೂರಪ್ಪ

ಬೆಳಗಾವಿ, ಜೂ. 4: `ಎಸೆಸೆಲ್ಸಿ ಪರೀಕ್ಷೆ ನಡೆಸುವ ವಿಚಾರವಾಗಿ ಸರಕಾರದಲ್ಲಿ ಯಾವುದೇ ಗೊಂದಲವಿಲ್ಲ. ಇನ್ನೂ ಒಂದೂವರೆ ಎರಡು ತಿಂಗಳ ನಂತರ ಸೋಂಕು ನಿಯಂತ್ರಣಕ್ಕೆ ಬಂದರೆ ಪರೀಕ್ಷೆ ನಡೆಸುವ ತೀರ್ಮಾನ ಮಾಡುತ್ತೇವೆ. ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆ ರದ್ದು ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸೆಸೆಲ್ಸಿ ಪರೀಕ್ಷೆಯಿಂದ ಮಕ್ಕಳಿಗೆ ಏನೂ ತೊಂದರೆ ಆಗುವುದಿಲ್ಲ. ಪೋಷಕರು ಗೊಂದಲಕ್ಕೆ ಒಳಗಾಗುವುದು ಬೇಡ. ನಾನು ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಈಗಾಗಲೇ ಅವರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಿಸಿದ್ದಾರೆ ಎಂದರು.
ಕೋವಿಡ್ ಸೋಂಕಿನ ಪರಿಸ್ಥಿತಿ ಸುಧಾರಣೆಯಾದರೆ ಎರಡು ದಿನಗಳಲ್ಲಿ ಎಲ್ಲ ಪರೀಕ್ಷೆ ಮುಗಿಸಬಹುದು. ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಜುಲೈನಲ್ಲಿ ಪರೀಕ್ಷೆ ನಡೆಸುತ್ತೇವೆ. ಇಲ್ಲವಾದರೆ ಎಸೆಸೆಲ್ಸಿ ಪರೀಕ್ಷೆ ನಡೆಸುವುದಿಲ್ಲ. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುತ್ತೇವೆ. ಆದುದರಿಂದ ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಯಡಿಯೂರಪ್ಪ ಇದೇ ವೇಳೆ ವಿವರಣೆ ನೀಡಿದರು.
ಮೈಸೂರಿನ ಐಎಎಸ್ ಅಧಿಕಾರಿಗಳಿಬ್ಬರ ಮಧ್ಯೆ ಗಲಾಟೆ ವಿಚಾರದ ಬಗ್ಗೆ ಶೀಘ್ರವೇ ಸರಿಪಡಿಸಲು ಕ್ರಮ ವಹಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿಗೆ ತೆರಳಿದ್ದಾರೆ. ಆ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಶ್ರೀಮಂತ ಪಾಟೀಲ್ ಹಾಜರಿದ್ದರು.







