ನಟ ಚೇತನ್ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ದೂರು
ಬೆಂಗಳೂರು, ಜೂ.7: ಬ್ರಾಹ್ಮಣರನ್ನು ಮಾನಸಿಕವಾಗಿ ನೋಯಿಸಿರುವ ನಟ, ಚಿಂತಕ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದೆ.
ಸೋಮವಾರ ನಗರದ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಚೇತನ್ ವಿರುದ್ಧ ದೂರು ಸಲ್ಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಚೇತನ್ ವಿಕೃತ ಮನಸ್ಸಿನ ವ್ಯಕ್ತಿಯಾಗಿದ್ದು, ಪ್ರಚಾರಕ್ಕಾಗಿ ಬ್ರಾಹ್ಮಣರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಲು ನಗರ ಪೊಲೀಸರು ಮುಂದಾಗಬೇಕು ಎಂದು ಒತ್ತಾಯ ಮಾಡಿದರು.
ಬ್ರಾಹ್ಮಣರು ಯಾವುದೇ ತಪ್ಪುಗಳನ್ನು ಮಾಡಿಲ್ಲ. ಆದರೂ, ಈ ಸಮುದಾಯವನ್ನು ಗುರಿಯಾಗಿಸಿಕೊಂಡು ಟೀಕಿಸಲಾಗುತ್ತಿದೆ. ಈ ಕುರಿತು ನಟ ಚೇತನ್ ಈ ಕೂಡಲೇ ಬೇಷರತ್ತಾಗಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
Next Story