ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ ವರದಿ ಊಹಾಪೋಹ: ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ. 23: ರಾಜ್ಯದಲ್ಲಿ ಕೋವಿಡ್ `ಡೆಲ್ಟಾ ಪ್ಲಸ್' ವೈರಸ್ ಪತ್ತೆಯಾಗಿರುವ ವರದಿ ಊಹಾಪೋಹ ಅಷ್ಟೇ. ಈ ಬಗ್ಗೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಂತಹ ಯಾವುದೇ ವೈರಸ್ ಈವರೆಗೂ ರಾಜ್ಯದಲ್ಲಿ ಪತ್ತೆಯಾಗಿಲ್ಲ ಎಂದರು. ಆರೋಗ್ಯ ಸಚಿವ ಡಾ.ಸುಧಾಕರ್, `ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ' ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್‍ವೈ, ‘ಈ ಬಗ್ಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುತ್ತದೆ' ಎಂದಷ್ಟೇ ಪ್ರತಿಕ್ರಿಯೆ ನೀಡಿದರು.
ಕಂದಾಯ ಸಚಿವ ಆರ್. ಅಶೋಕ್ ಅಪೇಕ್ಷೆಯಂತೆ ಪೌರಾಡಳಿತ ಹಾಗೂ ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲು ತೀರ್ಮಾನಿಸಲಾಗಿದೆ' ಎಂದು ಇದೇ ವೇಳೆ ಯಡಿಯೂರಪ್ಪ ತಿಳಿಸಿದರು.





