ರಾಜ್ಯದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ
ನೌಕರರ ಸಂಘದ ನೇತೃತ್ವದ ಸಭೆಯಲ್ಲಿ ನಿರ್ಧಾರ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಜೂ.23: ಸರಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸಾರಿಗೆ ನೌಕರರು ಪುನಃ ಮುಷ್ಕರ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಸರಕಾರ ನೀಡಿರುವ ಭರವಸೆಗಳನ್ನು ಈಡೇರಿಸದ ಹಿನ್ನೆಲೆ ಜು.1ರಂದು ಸಾರಿಗೆ ನೌಕರರ ಸಂಘದ ನೇತೃತ್ವದಲ್ಲಿ ಸಭೆ ಆಹ್ವಾನಿಸಲಿದ್ದು, ಮುಷ್ಕರ ನಡೆಸುವ ಬಗ್ಗೆಯೂ ನಿಗದಿ ಮಾಡಲಾಗುತ್ತದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ರಾಜ್ಯಾದ್ಯಂತ ನಾಲ್ಕು ನಿಗಮಗಳಿಂದ 1.30 ಲಕ್ಷ ಸಾರಿಗೆ ನೌಕರರಿದ್ದಾರೆ. ನೌಕರರ ಕುಟುಂಬಸ್ಥರು ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗುತ್ತದೆ. ಅಲ್ಲದೆ, ಈ ಹಿಂದೆ ಪ್ರತಿಭಟನೆ ನಡೆದಾಗ ರಾಜ್ಯ ಸರಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು. ಆದರೆ, ಲಿಖಿತ ರೂಪದಲ್ಲಿ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸರಕಾರ ನೀಡಿರುವ ಭರವಸೆಯಂತೆ, ಆರನೆ ವೇತನ ಆಯೋಗ ಜಾರಿ ಮಾಡಲೇಬೇಕು. ಮುಷ್ಕರದಲ್ಲಿ ಭಾಗಿಯಾಗಿದ್ದವರನ್ನು ವರ್ಗಾವಣೆ, ಅಮಾನತು ಮಾಡಲಾಗಿದೆ. ಕೂಡಲೆ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಅವರು ಒತ್ತಾಯ ಮಾಡಿದರು.





