ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕೆ ಅರ್ಧ ಡಜನ್ಗೂ ಹೆಚ್ಚು ಆಕಾಂಕ್ಷಿಗಳಿದ್ದಾರೆ: ಎಸ್.ಆರ್. ಪಾಟೀಲ್

ಎಸ್.ಆರ್. ಪಾಟೀಲ್
ಕೊಪ್ಪಳ, ಜೂ. 24: 'ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಧ ಡಜನ್ಗೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಕುರಿತು ಹಾದಿ-ಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ' ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಆಕ್ಷೇಪಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೆಲ ಶಾಸಕರ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಪಕ್ಷದಲ್ಲಿ ಬಹಳ ಜನ ಸಿಎಂ ಆಕಾಂಕ್ಷಿಗಳಿದ್ದಾರೆ. ನನಗೂ ಬಹಳ ಜನ ಅಭಿಮಾನಿಗಳಿದ್ದು, ಅನೇಕರು ಪಾಟೀಲ್ರೇ ನೀವು ಸಿಎಂ ಸ್ಥಾನಕ್ಕೆ ಯೋಗ್ಯರಿದ್ದೀರಿ ಎಂದು ಹೇಳುತ್ತಾರೆ. ಆದರೆ ನಾನು ಅದನ್ನು ಹೇಳಲು ಆಗುವುದಿಲ್ಲ' ಎಂದರು.
`ನಮ್ಮಲ್ಲಿ ಮೂಲ, ವಲಸಿಗರೆಂಬ ಭಿನ್ನಾಭಿಪ್ರಾಯವಿಲ್ಲ. ಪಕ್ಷದಲ್ಲಿ ನಾಯಕರಿಗೆ ಕೊರತೆಯಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಸನ್ಯಾಸಿಗಳಾಗಿದ್ದರೆ ಮಠದಲ್ಲಿ ಇರುತ್ತಾರೆ. ಶಾಸಕಾಂಗ ಸಭೆಯಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು' ಎಂದು ಹೇಳಿದರು.





