ವಿದ್ಯಾರ್ಥಿಗಳ ಕಲಿಕೆಯ ಪರಾಮರ್ಶೆಗೆ ಕಲಿಕಾ ನಿರಂತರತೆ ಕಾರ್ಯಪಡೆ ರಚನೆ: ಸುರೇಶ್ ಕುಮಾರ್

ಬೆಂಗಳೂರಬ, ಜೂ.25: ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ಪಡೆಯಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಮತ್ತು ಡಾ.ದೇವಿಶೆಟ್ಟಿ ಸಮಿತಿ ವರದಿ ಕುರಿತು ಚರ್ಚಿಸಲು ಆಯೋಜಿಸಿದ್ದ ವಿವಿಧ ಶಿಕ್ಷಣ ತಜ್ಞರು, ಶಿಕ್ಷಣ ಕುರಿತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆಯ ನಂತರ ಮಾತನಾಡಿದ ಅವರು, ಸಭೆಯಲ್ಲಿ ಶಾಲಾರಂಭ ಕುರಿತು ಹಲವಾರು ಅಭಿಪ್ರಾಯಗಳು ವ್ಯಕ್ತವಾಗಿದ್ದು, ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.
ಈ ಬಾರಿ ನಿರಂತರ ಮೌಲ್ಯಾಂಕನ: ಕೋವಿಡ್‍ನಂತಹ ಸಂದರ್ಭದಲ್ಲಿ ಮಕ್ಕಳ ಮೌಲ್ಯಾಂಕನ ಮಾಡಲು ಅನುಕೂಲವಾಗುವಂತೆ ಈ ವರ್ಷದಿಂದ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲೂ ನಿರಂತರ. ತ್ರೈಮಾಸಿಕ, ಅರ್ಧವಾರ್ಷಿಕ, ವಾರ್ಷಿಕ ಮೌಲ್ಯಾಂಕನ ಪದ್ಧತಿಯನ್ನೂ ಅಳವಡಿಸಿಕೊಳ್ಳಬೇಕೆಂಬ ಕುರಿತೂ ಚಿಂತನೆ ನಡೆಸಲಾಗಿದ್ದು, ಈ ಕುರಿತಂತೆಯೂ ಕಾರ್ಯಪಡೆ ವರದಿ ನೀಡಲಿದೆ ಎಂದು ಅವರು ಹೇಳಿದ್ದಾರೆ.





