ಸಿಎಂ ಪುತ್ರ ವಿಜಯೇಂದ್ರ ಹೆಸರಿನಲ್ಲಿ ವಂಚನೆ ಆರೋಪ: ಸಚಿವ ಶ್ರೀರಾಮುಲು ಆಪ್ತ ಸಹಾಯಕನ ಬಂಧನ

ಬೆಂಗಳೂರು, ಜು.1: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನೀಡಲಾದ ದೂರಿನ ಬೆನ್ನಲ್ಲೇ ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕ ಎನ್ನಲಾದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ನಿವಾಸಿ ರಾಜು ಯಾನೆ ರಾಜಣ್ಣ (35) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಆರೋಪ?: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ತನಗೆ ಆಪ್ತರೆಂದು ರಾಜಣ್ಣ ಗುರುತಿಸಿಕೊಂಡು ಸರಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ಉದ್ಯಮಿಯೊಬ್ಬರಿಂದ ಇತ್ತೀಚೆಗಷ್ಟೇ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಎನ್ನಲಾಗಿದೆ. ಸಂಭಾಷಣೆ ಆಡಿಯೊ ಗಮನಕ್ಕೆ ಬರುತ್ತಿದ್ದಂತೆ ಸ್ವತಃ ವಿಜಯೇಂದ್ರ ಅವರೇ ನಗರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ರಾಜಣ್ಣ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ಪಡೆಯಬೇಕಿದೆ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.





