ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ದೊರೆಯಲಿ: ಸಂಸದ ಜಿ.ಸಿ. ಚಂದ್ರಶೇಖರ್

ಬೆಂಗಳೂರು, ಜು.5: ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕೊರತೆ ಆಗದಂತೆ ರಾಜ್ಯ ಸರಕಾರ, ಸ್ಥಳೀಯ ಆಡಳಿತ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಂಸದ ಜಿ.ಸಿ.ಚಂದ್ರಶೇಖರ್ ತಿಳಿಸಿದರು.
ಸೋಮವಾರ ನಗರದ ಇಎಸ್‍ಐಸಿ, ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ವಸತಿ ಗೃಹಗಳಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳು ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಸೂಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯಾರ್ಥಿ ವೇತನ ಮತ್ತು ಮೂಲ ಸೌಕರ್ಯ ವ್ಯವಸ್ಥೆ ಸರಿಯಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಸಂಬಂಧ ಸರಕಾರದ ಮಟ್ಟದಲ್ಲೂ ಚರ್ಚೆ ನಡೆಸಲಾಗುವುದು. ಜತೆಗೆ, ಶೀಘ್ರದಲ್ಲಿಯೇ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ಎಸ್‍ಯುಐ ರಾಜ್ಯಾಧ್ಯಕ್ಷ ಮಂಜುನಾಥ ಗೌಡ ಮಾತನಾಡಿ, ಇಲ್ಲಿನ ವಿದ್ಯಾರ್ಥಿಗಳಿಗೆ ಸುಮಾರು ನಾಲ್ಕು ವರ್ಷದಿಂದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು. ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದರೂ, ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.





