ಎಸೆಸೆಲ್ಸಿ ಪರೀಕ್ಷೆ ಕುರಿತು ಗೊಂದಲಕಾರಿ ಹೇಳಿಕೆ ಬೇಡ: ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜು.9: ಎಸೆಸೆಲ್ಸಿ ಪರೀಕ್ಷೆಗೆ ಕೇವಲ 10 ದಿನಗಳಿವೆ. ಈ ಸಂದರ್ಭದಲ್ಲಿ ಯಾರು ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ಎಲ್ಲರೂ ಮುಂದಾಗಬೇಕೆಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಮನವಿ ಮಾಡಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಪ್ರತಿಷ್ಠೆಗಾಗಿ ಎಸೆಸೆಲ್ಸಿ ಪರೀಕ್ಷೆ ನಡೆಸುತ್ತಿಲ್ಲ. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರ ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರಹಸ್ಯ ಕಾರ್ಯಸೂಚಿ ಇಲ್ಲ, ಹಾಗೂ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವ ಉದ್ದೇಶವು ಇಲ್ಲ. ಪ್ರಶ್ನೆ ಪತ್ರಿಕೆಗಳು ನೇರವಾಗಿ, ಸರಳವಾಗಿರುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಕೌಟ್ ಅಂಡ್ ಗೈಡ್ಸ್, ರೋಟರಿ ಕ್ಲಬ್, ಯೂಥ್ ಫಾರ್ ಸೇವಾ ಸಂಸ್ಥೆಗಳು ಸೇರಿದಂತೆ ಹಲವು ಸಂಘ–ಸಂಸ್ಥೆಗಳು ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳನ್ನು ಉಚಿತವಾಗಿ ನೀಡಿವೆ. ಹೀಗೆ ಎಸೆಸೆಲ್ಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವಂತಹ ಕೆಲಸಗಳಾಗಲಿ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಸಹಕಾರದಿಂದ ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪರೀಕ್ಷಾ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಯ ಪೈಕಿ ಶೆಗ.95ರಷ್ಟು ಮಂದಿಗೆಮೊದಲ ಡೋಸ್ ಲಸಿಕೆ ಹಾಕಲಾಗಿದೆ. ಪರೀಕ್ಷೆ ಪ್ರಾರಂಭವಾಗುಷ್ಟರಲ್ಲಿ ಉಳಿದ ಸಿಬ್ಬಂದಿಗಳಿಗೂ ಲಸಿಕೆ ನೀಡಲಾಗಿರುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಇದೇ ವೇಳೆ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಮುಖ್ಯಾಂಶಗಳು
-ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆ ಹೇಗಿರಬೇಕೆಂಬುದರ ಬಗ್ಗೆ ಮಾರ್ಗಸೂಚಿಗಳನ್ನು ಪಡೆಯಲು ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿಯು ಮುಂದಿನ ಹತ್ತು ದಿನದೊಳಗೆ ವರದಿ ಸಲ್ಲಿಸಲಿದೆ. ಅದರಂತೆ ಮುಂದಿನ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಿರ್ಧಾರವಾಗಲಿದೆ.
-ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಫೋನ್ ಸೇರಿದಂತೆ ಆನ್‍ಲೈನ್ ಕಲಿಕೆಗೆ ಬೇಕಾದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.
-ಪ್ರತಿ ಗ್ರಾಮಪಂಚಾಯತ್‍ನಲ್ಲಿ ಟಿವಿ ವ್ಯವಸ್ಥೆ ಇರುವಂತೆ ಸೂಚಿಸಲಾಗಿದೆ. ಟಿವಿ ಲಭ್ಯತೆ ಇಲ್ಲದ ವಿದ್ಯಾರ್ಥಿಗಳಿಗೆ ಚಂದನವಾಹಿನಿಯಲ್ಲಿ ಪ್ರಸಾರವಾಗುವ ತರಗತಿಗಳನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಬೇಕು.
-ಪ್ರಥಮ ಪಿಯು ತರಗತಿಗೆ ಸರಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಹೆಚ್ಚು ದಾಖಲಾತಿ ಮಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
-ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ಜುಲೈ 20ರ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಒಂದು ಪ್ರಶ್ನೆ ಪತ್ರಿಕೆಯಲ್ಲಿ ಮೂರು ವಿಷಯಗಳು ಸೇರಿ ಒಟ್ಟು 120 ಅಂಕಗಳಿಗೆ ಪರೀಕ್ಷೆ ಬರೆಯುವುದು ವಿದ್ಯಾರ್ಥಿಗಳಿಗೆ ಹೆಚ್ಚಿನ ಕಷ್ಟವಾಗಲಿದೆ. ಈ ಬಗ್ಗೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಸಚಿವ ಸುರೇಶ್‍ಕುಮಾರ್ ಅವರೊಂದಿಗೆ ನಡೆದ ಸಂವಾದದಲ್ಲಿ ವ್ಯಕ್ತಪಡಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಂದು ಪ್ರಕಟಿಸುತ್ತಲೇ ಪರೀಕ್ಷೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ ಹಾಗೂ ಶಿಕ್ಷಣ ಸಚಿವರ ಪ್ರತಿಷ್ಠೆಯಾಗಿದೆ.
-ಲೋಕೇಶ್ ತಾಳಿಕಟ್ಟೆ, ಅಧ್ಯಕ್ಷ,
ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ







