ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ಮುರುಗೇಶ್ ನಿರಾಣಿಯನ್ನು ಭೆಟಿಯಾದ ಸಂಸದೆ ಸುಮಲತಾ

ಬೆಂಗಳೂರು, ಜು.12: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳಿಂದ ದೊಡ್ಡಮಟ್ಟದಲ್ಲಿ ಪರಿಸರ ಹಾನಿ ಮತ್ತು ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಹಾನಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸರಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ.ರಾಜಧನ ಮತ್ತು ದಂಡ ಬಾಕಿ ಇರುವ ಕಾರಣದಿಂದ ಜು.7ರಂದು ಜಿಲ್ಲಾಧಿಕಾರಿ, ಪಾಂಡವಪುರ ಉಪವಿಭಾಗಾಧಿಕಾರಿಗಳು, ಹಿರಿಯ ಭೂ ವಿಜ್ಞಾನಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿರುವುದಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಚನ್ನನಕೆರೆ ಮತ್ತು ಹಂಗರಹಳ್ಳಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳ ಸ್ಥಳ ಪರಿವೀಕ್ಷಣೆ ಸಂದರ್ಭದಲ್ಲಿ ಸರಕಾರದ ಬೊಕ್ಕಸಕ್ಕೆ ದೊಡ್ಡಮಟ್ಟದಲ್ಲಿ ನಷ್ಟವಾಗಿರುವ ವಾಸ್ತವಾಂಶಗಳು ಕಂಡು ಬಂದಿದೆ ಎಂದು ಹೇಳಿದ್ದಾರೆ.
ಈ ವೇಳೆ ಅಕ್ರಮ ಕಲ್ಲು ಗಣಿಗಾರಿಕೆಗಳ ಪ್ರದೇಶಕ್ಕೆ ನಾನು ಪರಿವೀಕ್ಷಣೆ ನಡೆಸಲು ತೆರಳದಂತೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಕಲ್ಲು ಗಣಿ ಮಾಲಕರು ರಸ್ತೆಗೆ ಅಡ್ಡಲಾಗಿ ಎತ್ತರವಾಗಿ ಮಣ್ಣು ಹಾಕಿಸಿ ರಸ್ತೆಯನ್ನು ಸ್ಥಗಿತಗೊಳಿಸಿದ್ದು, ಅಕ್ರಮ ಕಲ್ಲು ಗಣಿಗಾರಿಕೆಗಳ ಮಾಲಕರ ಬೆಂಬಲಿಗರು ಗಣಿ ಪ್ರದೇಶಕ್ಕೆ ಭೇಟಿ ನೀಡುವಂತೆ ನಿರ್ಬಂಧಿಸಿ ಮುಷ್ಕರ ನಡೆಸಿದರು ಎಂದು ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.
ಈ ಎಲ್ಲ ವಾಸ್ತವಾಂಶಗಳನ್ನು ತಮ್ಮ ಗಮನಕ್ಕೆ ತರಬಯಸುತ್ತಾ, ಕೃಷ್ಣರಾಜಸಾಗರ ಅಣೆಕಟ್ಟೆಯ ಸುರಕ್ಷತಾ ಹಿತದೃಷ್ಟಿಯಿಂದ ಕೃಷ್ಣರಾಜಸಾಗರ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಹಾಗೂ ಮಂಡ್ಯ ಜಿಲ್ಲೆಯ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳನ್ನು ಈ ಕೂಡಲೆ ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆಗಳಿಂದ ಈಗಾಗಲೆ ಸುಮಾರು 1200 ಕೋಟಿ ರೂ.ರಾಜಧನ ಮತ್ತು ದಂಡ ಬಾಕಿ ಇದ್ದು, ಡ್ರೋಣ್ ಸರ್ವೆ ನಡೆಸಿ ಬಾಕಿಯಿರುವ ರಾಜಧನ ಮತ್ತು ದಂಡವನ್ನು ವಸೂಲಾತಿ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ತುಂಬಿಸುವ ಕುರಿತು ತ್ವರಿತಗತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







