ಮೇಕೆದಾಟು ಯೋಜನೆ ಜಾರಿಗೊಳಿಸುವಲ್ಲಿ ಹಿಂದೇಟು ಹಾಕಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ
"ತಮಿಳುನಾಡು ಸರಕಾರದ ನಿರ್ಣಯಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ"

ಬೆಂಗಳೂರು, ಜು.13: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರಕಾರ ಏನೇ ನಿರ್ಣಯ ಕೈಗೊಂಡರೂ ನಾವು ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಸಂಬಂಧ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ವಿಚಾರದಲ್ಲಿ ಹಿಂದೇಟು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳು ಹಾಗೂ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇಕೆದಾಟು ಯೋಜನೆಯೂ ಕುಡಿಯುವ ನೀರಿಗೆ ಸಂಬಂಧಿಸಿದ್ದಾಗಿದೆ. ಈ ಯೋಜನೆಗೆ ಅಡ್ಡಿಪಡಿಸುವುದು ಸರಿಯಲ್ಲ. ಯಾವ ರಾಜ್ಯ ಏನು ನಿರ್ಣಯ ಕೈಗೊಳ್ಳುತ್ತದೆ ಅನ್ನೋದರ ಬಗ್ಗೆ ನಾವು ಚಿಂತಿಸುವುದಿಲ್ಲ. ನಮ್ಮ ನೀರು, ನಮ್ಮ ಹಕ್ಕು ಅದನ್ನು ಬಳಸಿಕೊಳ್ಳಲು ಅಗತ್ಯವಿರುವ ಯೋಜನೆಯನ್ನು ಜಾರಿಗೊಳಿಸಲು ನಮ್ಮನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಮೇಕೆದಾಟು ಯೋಜನೆ ಕುರಿತು ಈಗಾಗಲೆ ಡಿಪಿಆರ್ ಸಿದ್ಧವಾಗಿದೆ. ಕೇಂದ್ರ ಜಲ ಆಯೋಗದ ಮುಂದೆಯೂ ಡಿಪಿಆರ್ ಅನ್ನು ಮಂಡಿಸುತ್ತೇವೆ. ಈ ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಅಗತ್ಯವಿದ್ದು, ಇವತ್ತು ನಡೆದ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೂ ಈ ಯೋಜನೆಯ ಅಗತ್ಯದ ಕುರಿತು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಸರಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕೃಷ್ಣಾ ನ್ಯಾಯಾಧೀಕರಣದ ತೀರ್ಪಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದು, ಎತ್ತಿನಹೊಳೆ ಯೋಜನೆ, ಕಳಸಾ ಬಂಡೂರಿ ಯೋಜನೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಕೇಂದ್ರ ಸರಕಾರ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ: ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳು, ಜಲಜೀವನ್ ಮಿಷನ್ ಯೋಜನೆ ಕುರಿತು ಚರ್ಚೆ ಮಾಡಿದ್ದೇವೆ. ಕರ್ನಾಟಕಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತೇವೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸರಕಾರ ಸರ್ವಪಕ್ಷಗಳ ಸಭೆ ಕರೆದು ಕೈಗೊಂಡಿರುವ ನಿರ್ಣಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮಿಳುನಾಡು ಸರಕಾರ ಏನು ಬೇಕೋ ಆ ನಿರ್ಣಯ ತೆಗೆದುಕೊಳ್ಳಲಿ. ಕೇಂದ್ರ ಸರಕಾರವಾಗಿ ನಾವು ಯಾವುದು ಸೂಕ್ತವೋ ಆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸರಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ನ್ಯಾಯಾಲಯ ಏನು ತೀರ್ಪು ನೀಡುತ್ತೋ ನೋಡೋಣ. ಎರಡು ರಾಜ್ಯಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಸೂಕ್ತ ತೀರ್ಮಾನ ಮಾಡುತ್ತದೆ. ಪಕ್ಷವೇ ಬೇರೆ, ಸರಕಾರವೇ ಬೇರೆ, ಕಾನೂನು ಬದ್ಧವಾಗಿ ನಾವು ಏನು ಮಾಡಬೇಕೋ ಅದನ್ನೆ ಮಾಡುತ್ತೇವೆ ಎಂದು ಅವರು ಹೇಳಿದರು.







