ಯುಎಪಿಎಯಡಿ ಬಂಧಿಸಿರುವ ಹೋರಾಟಗಾರರನ್ನು ಬಿಡುಗಡೆಗೊಳಿಸಿ:ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಧರಣಿ

ಬೆಂಗಳೂರು, ಜು.13: ಕೇಂದ್ರ ಸರಕಾರ ಯುಎಪಿಎ ಕಾಯ್ದೆಯಡಿ ಬಂಧಿಸಿರುವ ಮಾನವ ಹಕ್ಕು ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕಾರ್ಯದರ್ಶಿ ಶಾಂತಾ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಕೋವಿಡ್ ಸಂಕಷ್ಟದಿಂದ ಜನತೆ ನರಳುತ್ತಿರುವಾಗಲೇ ಕೇಂದ್ರ ಸರಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಗಾಯದ ಬೆಲೆ ಬರೆ ಎಳೆಯುತ್ತಿದೆ. ಮತ್ತೊಂದೆಡೆ ಕೇಂದ್ರ ಸರಕಾರ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಾರರನ್ನು ಯುಎಪಿಎ ಸೇರಿದಂತೆ ವಿವಿಧ ಕಠಿಣ ಕಾಯ್ದೆಯಡಿ ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ದೇಶದಲ್ಲಿ ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ವಹಿಸಿ, ತಮಗೆ ತೋಚಿದ ರೀತಿಯಲ್ಲಿ ಏಕಪಕ್ಷೀಯವಾಗಿ ಜನವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಹೊರಟಿದೆ ಎಂದು ಅವರು ಆರೋಪಿಸಿದ್ದಾರೆ.
ಕೇಂದ್ರ ಸರಕಾರ ತನ್ನದೇ ದೇಶದ ಪ್ರಜೆಗಳ ಮೇಲೆ ಬೆಲೆ ಏರಿಕೆಯ ಮೂಲಕ ವಿವಿಧ ಸಂಕಷ್ಟಕ್ಕೆ ದೂಡಬಾರದು. ಹಾಗೂ ದೇಶಕ್ಕೆ ಬಹುತ್ವ, ಬಹುಸಂಸ್ಕೃತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವೇ ಜೀವಾಳವಾಗಿದ್ದು, ಇದಕ್ಕೆ ಧಕ್ಕೆ ತರಬಾರದೆಂದು ಅವರು ಒತ್ತಾಯಿಸಿದ್ದಾರೆ.
ಹಕ್ಕೊತ್ತಾಯಗಳು
- ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಲೇ ಕಡಿಮೆ ಮಾಡಬೇಕು.
- ಯುಎಪಿಎ ಮತ್ತು ಇತರೆ ಸುಳ್ಳು ಆರೋಪಗಳ ಮೇಲೆ ಬಂಧಿಸಿರುವ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು.
- ಉತ್ತರ ಪ್ರದೇಶದ ಅಜಂಗರ್ ಹಾಗೂ ಲಕ್ಷ್ಮೀಪುರದ ದಲಿತ ಮಹಿಳೆಯರ ಮೇಲೆ ಲೈಂಗಿಕ ಹಲ್ಲೆ ನಡೆಸಿರುವ ಪೊಲೀಸರು ಹಾಗೂ ಗೂಂಡಾಗಳಿಗೆ ಕಠಿಣ ಶಿಕ್ಷೆಗೆ ಗುರಿ ಮಾಡಬೇಕು.





