ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ: ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್
ಬೆಂಗಳೂರು, ಜು.14: ಎಸೆಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿ ಸಕಾಲದಲ್ಲಿ ಪ್ರವೇಶ ಪತ್ರ ಪಡೆಯಲು ಸಮಸ್ಯೆಯಾಗದಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ಸೂಕ್ತ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಕೆಲವು ಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಪ್ರವೇಶಪತ್ರ ಪಡೆಯುವಲ್ಲಿ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವುದರ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಎಸೆಸೆಲ್ಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಜೂ.29ರಂದು ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಅಪ್‍ಲೋಡ್ ಮಾಡಲಾಗಿರುತ್ತದೆ. ಸದರಿ ಅಂತಿಮ ಪ್ರವೇಶ ಪತ್ರವನ್ನು ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಲಾಗಿನ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಲಾಗಿದೆ. ಅದರಂತೆ ಬಹುತೇಕ ಶಾಲೆಗಳಲ್ಲಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಾಗಿಲ್ಲ.
ಆದರೆ, ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ದೊರಕುತ್ತಿಲ್ಲವೆಂಬ ಆರೋಪಗಳು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಪ್ರವೇಶಪತ್ರ ಸಿಗದೆ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪ್ರವೇಶಪತ್ರ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ತಿಳಿಸಿದೆ.





