ರ್ಯಾಗಿಂಗ್ ತಡೆಗೆ ಮುಂಜಾಗ್ರತೆ ವಹಿಸದ ಕಾಲೇಜು ವಿರುದ್ಧ ಕೇಸು: ಕಮಿಷನರ್ ಶಶಿಕುಮಾರ್

ಮಂಗಳೂರು, ಜು.17: ಕಾಲೇಜುಗಳಲ್ಲಿ ರ್ಯಾಗಿಂಗ್ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಅಂತಹ ಕಾಲೇಜು ಗಳ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಕಳೆದ ಆರು ತಿಂಗಳುಗಳಲ್ಲಿ ನಾಲ್ಕು ರ್ಯಾಗಿಂಗ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ 20ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ದೇಶ, ವಿದೇಶ ಸಹಿತ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ಗಳಿದ್ದು ರ್ಯಾಗಿಂಗ್ ತಡೆ ಸೇರಿದಂತೆ ವಿದ್ಯಾರ್ಥಿಗಳ ಸುರಕ್ಷತೆಗೆ ಇಲಾಖೆ ಕ್ರಮ ಕೈಗೊಂಡಿದೆ ಎಂದರು.
ಇಂತಹ ಹಲವು ಕ್ರಮ ಕೈಗೊಂಡರೂ ಕೆಲವು ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ರ್ಯಾಗಿಂಗ್‌ನಲ್ಲಿ ತೊಡಗುವ ವಿದ್ಯಾರ್ಥಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕಾಲೇಜುಗಳಲ್ಲಿ ರ್ಯಾಗಿಂಗ್ ತಡೆ ಸಮಿತಿಗಳ ರಚನೆ ಸೇರಿದಂತೆ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಾಲೇಜು ಆಡಳಿತ ಮಂಡಳಿಗೂ ಸೂಚನೆ ನೀಡಲಾಗಿದೆ. ಆಡಳಿತ ಮಂಡಳಿ ನಿರ್ಲಕ್ಷ ವಹಿಸಿದರೆ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.







