ಜುಲೈ 21ರ ವರೆಗೆ ರಾಜ್ಯಾದ್ಯಂತ ಧಾರಾಕಾರ ಮಳೆ: ಹವಾಮಾನ ಇಲಾಖೆ

ಬೆಂಗಳೂರು, ಜು. 18: ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರವೇಶವಿದ್ದು, ಜು.21ರ ವರೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ. ಜು.21ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜು.19ರವರೆಗೆ ಆರೆಂಜ್ ಅಲರ್ಟ್ ಹಾಗೂ ಜು.20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜು.19ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆ: ನಗರದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರವಿವಾರ ಕೂಡ ಮಧ್ಯಾಹ್ನದ ವೇಳೆಗೆ ಕೆಲವು ಕಡೆ ಸಾಧಾರಣ ಇನ್ನೂ ಕೆಲವು ಕಡೆ ತುಂತುರು ಮಳೆಯಾಯಿತು. ಮುಂದಿನ ಎರಡು ದಿನ ನಗರದಲ್ಲಿ ಗರಿಷ್ಠ ತಾಪಮಾನ 27 ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.







