ಅತ್ಯಾಚಾರಕ್ಕೆ ಯತ್ನ ಆರೋಪ : ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ರುಕ್ಮಯ ಮಡಿವಾಳ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೊಕ್ಕಡ ನಿವಾಸಿ ರುಕ್ಮಯ ಮಡಿವಾಳ (41) ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎಂದು ದೂರಲಾಗಿದೆ.
ಈತ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ 16ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಅತ್ಯಾಚಾರಕ್ಕೂ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸದಂತೆ ಜೀವ ಬೆದರಿಕೆಯನ್ನು ಹಾಕಿದ್ದಾನೆಂದು ಆರೋಪಿಸಲಾಗಿದೆ.
ಬಾಲಕಿಯಿಂದ ಮಾಹಿತಿ ಪಡೆದ ಆಕೆಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಆರೋಪಿ ವಿವಿಧ ಹಿಂದುತ್ವ ಸಂಘಟನೆಗಳಲ್ಲಿ ಹಾಗೂ ಬಿಜೆಪಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಹಿಂದೂಜಾಗರಣ ವೇದಿಕೆಯ ಕೊಕ್ಕಡ ಗ್ರಾಮಸಮಿತಿಯಲ್ಲಿ ಪದಾಧಿಕಾರಿಯಾಗಿದ್ದ ಎನ್ನಲಾಗಿದೆ. ಈತ ಮಾಟ ಮಂತ್ರ ಮಾಡುತ್ತಿದ್ದ ಎನ್ನಲಾಗಿದ್ದು, ಮಾಟ ಮಂತ್ರದ ಹೆಸರಿನಲ್ಲಿ ಯುವತಿಯರನ್ನು ಬಲೆಗೆ ಹಾಕಿಕೊಳ್ಳುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಈತನ ವಿರುದ್ದ ಪ್ರಕರಣ ದಾಖಲಾಗಿತ್ತು. ಅದಾದ ಊರು ಬಿಟ್ಟು ಪರಾರಿಯಾಗಿದ್ದ ಈತ ಬಳಿಕ ಮಂತ್ರವಾದಿಯಾಗಿ ಊರಿನಲ್ಲಿ ಕಾಣಿಸಿಕೊಂಡಿದ್ದ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ್ದ ಎಂದು ಆರೋಪಿಸಲಾಗಿದೆ.







