ಬೆಂಗಳೂರಿನಲ್ಲಿ ಹೆಚ್ಚಿನ ಆಸ್ಪತ್ರೆ ನಿರ್ಮಾಣಕ್ಕೆ ಬಿಬಿಎಂಪಿ ಪ್ರಸ್ತಾವ

ಬೆಂಗಳೂರು, ಜು. 18: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಅನುದಾನ ನೀಡುವಂತೆ ರಾಜ್ಯ ಸರಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ.
ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‍ಗಳ ಪೈಕಿ ಕೇವಲ ಕೇವಲ 141 ವಾರ್ಡ್‍ಗಳಲ್ಲಿ ಮಾತ್ರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಉಳಿದ 57 ವಾರ್ಡ್‍ಗಳಲ್ಲಿ ಆಸ್ಪತ್ರೆ ಆರಂಭಿಸಲು ಸರಕಾರ ಅನುಮತಿ ನೀಡಿ, 10 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ, ಈ ಸಂಬಂಧ 114 ಕೋಟಿ ರೂ. ಅನುದಾನ ನೀಡುವಂತೆ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ.
ಅದೇ ರೀತಿ, ನಗರದ 28 ವಾರ್ಡ್‍ಗಳಲ್ಲಿ ಸ್ಪೆಷಾಲಿಟಿ ಆಸ್ಪತ್ರೆ (ಸೆಕೆಂಡರಿ ಹಾಸ್ಪಿಟಲ್) ಹಾಗೂ ನಾಲ್ಕು ಕಡೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆರಂಭಿಸಲು 1 ಸಾವಿರ ಕೋಟಿ ರೂಪಾಯಿ ಯೋಜನೆಗೆ ಪ್ರಸ್ತಾವನೆಯನ್ನು ಬಿಬಿಎಂಪಿ ಸರಕಾರಕ್ಕೆ ಸಲ್ಲಿಸಿದೆ.
ಇನ್ನು, 28 ಸ್ಪೆಷಾಲಿಟಿ ಆಸ್ಪತ್ರೆ ಪೈಕಿ 4 ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಎಲ್ಲ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಒಟ್ಟಿನಲ್ಲಿ ನಗರದಲ್ಲಿ ಕೋವಿಡ್ ಎರಡನೆ ಅಲೆ ಸೃಷ್ಟಿಸಿದ ಆತಂಕ, ಅವಘಡಗಳು ಮುಂದೆ ನಡೆಯದಂತೆ ಆರೋಗ್ಯ ವ್ಯವಸ್ಥೆಯನ್ನು ಭದ್ರಗೊಳಿಸಲು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್, ನಗರದ ಆಸ್ಪತ್ರೆಗಳ ಸುಧಾರಣೆ, ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರಕಾರ ಬಜೆಟ್‍ಗೆ ಸಮ್ಮತಿ ಸೂಚಿಸಿದರೆ ಕಾರ್ಯಾರಂಭ ಗೊಳಿಸಲಾಗುವುದು.ಜತೆಗೆ, ಸರಕಾರದ ತಾತ್ವಿಕ ಅನುಮೋದನೆ ಸಿಕ್ಕರೆ ಇತರೆ ತಯಾರಿಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.







