ಸಿಎಂ ಬದಲಾವಣೆಯಾದರೆ ಕಾಂಗ್ರೆಸ್ ಮೇಲೆ ಪರಿಣಾಮ ಬೀರಲ್ಲ: ಸಿದ್ದರಾಮಯ್ಯ
"ಭ್ರಷ್ಟ ಮುಖ್ಯಮಂತ್ರಿ ಅಧಿಕಾರದಿಂದ ಕೆಳಗಿಳಿಯುತ್ತಿದ್ದಾರೆ ಅನ್ನೋದು ಮುಖ್ಯ"

ಬೆಂಗಳೂರು, ಜು.19: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಆದರೆ, ಆಗ ನನ್ನ ಮಾತನ್ನು ಯಾರು ನಂಬಿರಲಿಲ್ಲ. ಈಗ ಅದಕ್ಕೆ ಕಾಲ ಸನ್ನಿಹಿತವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ಕುರಿತು ಸೋಮವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವುದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಆದರೆ, ಒಬ್ಬ ಭ್ರಷ್ಟ ಮುಖ್ಯಮಂತ್ರಿ ಅಧಿಕಾರದಿಂದ ಕೆಳಗಿಳಿಯುತ್ತಿದ್ದಾರೆ ಅನ್ನೋದು ಮುಖ್ಯ ಎಂದರು.
ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿಕೊಂಡಿರಬಹುದು. ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್.ಈಶ್ವರಪ್ಪ ಅವರನ್ನು ಬದಲಾಯಿಸುವ ಬಗ್ಗೆಯೂ ಆ ಆಡಿಯೋದಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಬದಲಾದರೆ ಕೆಲವು ಸಚಿವರು ಬದಲಾಗಬಹುದು ಎಂದು ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಗೆ ಅವಧಿಗೂ ಮುನ್ನ ಚುನಾವಣೆ ಬರುವ ಸಾಧ್ಯತೆಗಳಿಲ್ಲ. ಮುಖ್ಯಮಂತ್ರಿ ಬದಲಾದರೆ ಚುನಾವಣೆ ಎದುರಾಗುವುದಿಲ್ಲ. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ ಎಂದು ಅವರು ಹೇಳಿದರು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಹ್ವಾನದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗುತ್ತಿದ್ದೆನೆ. ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಪದಾಧಿಕಾರಿಗಳ ನೇಮಕ ಸೇರಿದಂತೆ ಯಾವುದೆ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಸಿದ್ದರಾಮಯ್ಯ ತಿಳಿಸಿದರು.







