ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ರದ್ದು: ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜು.22: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಜು.25ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ರದ್ದುಪಡಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಸಚಿವರಿಗೆ ಔತಣ ಕೂಟ ಹಾಗೂ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಲಾಗಿತ್ತು. ಆದರೆ, ಸದದ್ಯ ಪರಿಸ್ಥಿತಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣ ಕೂಟವನ್ನು ಏರ್ಪಡಿಸದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳಿಗೆಲ್ಲ ನಾವು ಪ್ರತಿಕ್ರಿಯಿಸಲು ಆಗಲ್ಲ. ಇತ್ತೀಚೆಗಷ್ಟೇ ಯಡಿಯೂರಪ್ಪ ಹೊಸದಿಲ್ಲಿಗೆ ಹೋಗಿ ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.





