ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಜು.22: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜು.24ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಸಹ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಆಯಾ ಪ್ರದೇಶಕ್ಕನುಗುಣವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜು.23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜು.23ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.





