ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಜು.22: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯಪಾಲರು ಈ ಬಗ್ಗೆ ಗಮನಹರಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ರಾಜ್ಯಪಾಲರು, ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ರಾಜ್ಯದಲ್ಲಿ ಮಕ್ಕಳು, ಮಹಿಳೆಯರು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಗೃಹ ಇಲಾಖೆ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂಬ ಭಾವನೆ ಜನರಲ್ಲಿ ಮೂಡುವಂತಹ ಸನ್ನಿವೇಶ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣಗಳ ತ್ವರಿತ ವಿಲೇವಾರಿಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರ ನ್ಯಾಯ ಸಿಗುವಂತೆ ಮಾಡಬೇಕು. ಆ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ಸರಕಾರ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸುವ್ಯವಸ್ಥೆ ಹದಗೆಟ್ಟಿರುವುದು ಸೇರಿ ಹಲವು ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಈ ಬಗ್ಗೆ ಸರಕಾರ ಅಧಿವೇಶನ ಕರೆಯಬೇಕು. ಅಲ್ಲದೆ, ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಸಾರ್ವಜನಿಕರ ಸಮ್ಮುಖದಲ್ಲೇ ಕಗ್ಗೊಲೆಯಾಗಿದೆ. ಬ್ಯಾಂಕ್‍ಗೆ ನುಗ್ಗಿ ಹತ್ಯೆ ಮಾಡಿರುವುದು ಜನರಲ್ಲಿ ಭಯದ ವಾತಾವರಣ ನಿರ್ಮಿಸಿದೆ. ರಾಜ್ಯ ಸರಕಾರ ಕಾನೂನನ್ನು ಬಿಗಿಗೊಳಿಸಿ ಇಂತಹ ಕೃತ್ಯಗಳು ಮರುಕಳಿಸದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.







