ಮಹಿಳೆ ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಬೇಗ ಪತ್ತೆ ಹಚ್ಚಿ: ಪೊಲೀಸರಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಜು.24: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾಣೆ ಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರದಲ್ಲಿ ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ವಿವಿಧ ಕಾರಣಗಳಿಂದ ಕಾಣೆಯಾಗುವ ಮಹಿಳೆ ಮತ್ತು ಮಕ್ಕಳನ್ನು ಶೀಘ್ರದಲ್ಲಿ ಪತ್ತೆ ಹಚ್ಚದಿದ್ದಲ್ಲಿ ಅವರು ಅಪಾಯಕಾರಿ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಗಳಿದ್ದು, ತನಿಖಾಧಿಕಾರಿಗಳು ಆದಷ್ಟು ಶೀಘ್ರದಲ್ಲಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ಅವರ ರಕ್ಷಣೆ ಮಾಡಬೇಕು. ಹಾಗೂ ಇಂತಹ ಪ್ರಕರಣಗಳ ಪತ್ತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ವಿಶೇಷ ಕರ್ತವ್ಯದಲ್ಲಿ ನಿಯೋಜಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸಲಹೆ ನೀಡಿದರು.
ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥ ಗೊಳಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತಂತೆಯೂ ಗಮನ ಹರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಉಡುಪಿ ಸಾಂತ್ವನ ಕೇಂದ್ರ ಸ್ಥಗಿತ ಗೊಂಡಿದ್ದು, ಉಡುಪಿಗೆ ಸಂಬಂಧಪಟ್ಟ ನೊಂದ ಮಹಿಳೆಯರು ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಅಗತ್ಯ ನೆರವು ಪಡೆಯುವಂತೆ ತಿಳಿಸಿದರು.
ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ತೊಂದರೆಯಾಗುವ ಬಗ್ಗೆ ಖಾಸಗಿ ಸೇರಿದಂತೆ ಎಲ್ಲಾ ಕಚೇರಿಗಳಲ್ಲಿ ಅಂತರಿಕ ದೂರು ಸಮಿತಿ ರಚನೆಯಾಗಿರುವ ಬಗ್ಗೆ ಪರಿಶೀಲಿಸಿ. ನಿಯಮಿತವಾಗಿ ಸಮಿತಿಯ ಸಭೆ ನಡೆಸಿ ವರದಿ ಪಡೆಯು ತ್ತಿರಬೇಕು ಎಂದು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸೂಚಿಸಿದರು. ಜಿಲ್ಲೆಯ ವಲಸೆ ಕಾರ್ಮಿಕರಲ್ಲಿ ಬಾಲ್ಯ ವಿವಾಹ ನಡೆಯುವ ಸಾಧ್ಯತೆಗಳಿದ್ದು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ಅವರು ವಾಸಿಸುವ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಶಾಲಾ ಮಕ್ಕಳು 10 ದಿನಗಳಿಗಿಂತ ಹೆಚ್ಚು ಗೈರು ಹಾಜರಾದಲ್ಲಿ, ಅಂತಹ ಮಕ್ಕಳ ಮಾಹಿತಿಯನ್ನು ಶಾಲೆಗಳಿಂದ ಪಡೆದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮೂಲ ಜಿಲ್ಲೆ, ವಿಳಾಸ ಕುರಿತಾದ ಅವರ ಸಮರ್ಪಕ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸಿ ಎಂದರು.
ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದಲ್ಲಿ 2021ರ ಜೂನ್ ಅಂತ್ಯದವರೆಗೆ ಬಾಕಿ ಇದ್ದ 63 ಪ್ರಕರಣಗಳಲ್ಲಿ 24 ಪ್ರಕರಣ ಇತ್ಯರ್ಥಗೊಂಡಿದ್ದು, 16 ಸಾಂತ್ವನ ಕೇಂದ್ರಗಳಲ್ಲಿ ಮತ್ತು 23 ನ್ಯಾಯಾಲಯದಲ್ಲಿ ಬಾಕಿ ಇವೆ. ಕಾರ್ಕಳ ಮಹಿಳಾ ಸಾಂತ್ವನ ಕೇಂದ್ರದಲ್ಲಿ 23 ಪ್ರಕರಣಗಳಲ್ಲಿ 13 ಪ್ರಕರಣ ಇತ್ಯರ್ಥಗೊಂಡಿದ್ದು, 10 ಸಾಂತ್ವನ ಕೇಂದ್ರದಲ್ಲಿ ಬಾಕಿ ಇವೆ. ವರದಕ್ಷಿಣೆ ನಿಷೇದ ಕಾಯ್ದೆಯಡಿ ಡಿಸೆಂಬರ್‌ವರೆಗೆ ಬಾಕಿ ಇದ್ದ 47 ಪ್ರಕರಣಗಳಲ್ಲಿ, 29 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.
ಸಭೆಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಿವಿಧ ಜಿಲ್ಲಾ ಮಟ್ದದ ಅಧಿಕಾರಿಗಳು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.







