ತಾಳ್ಮೆಯಿಂದ ಅವಕಾಶಗಳನ್ನು ಬಳಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ಉದ್ಯಾವರ, ಜು.28: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ತಾಳ್ಮೆಯಿಂದ ಗ್ರಹಿಸಿಕೊಂಡು ಅದರ ಸದುಪ ಯೋಗ ಪಡೆದು ಕೊಳ್ಳಬೇಕು. ಈ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಉದ್ಯಾವರ ಸರಕಾರಿ ಪದಪೂರ್ವ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ ಅವರು ಹೇಳಿದ್ದಾರೆ.
ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದ ಯುಎಫ್‌ಸಿ ಪುಸ್ತಕ ಭಂಡಾರದಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.
ಮತ್ತೊಬ್ಬ ಅತಿಥಿ ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಎಸ್. ಕಿಶೋರ್‌ಕುಮಾರ್ ಮಾತನಾಡಿ, ಸಂಸ್ಥೆ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸುವುದು, ವಿದ್ಯಾರ್ಥಿ ವೇತನ ವಿತರಣೆ, ಸಮವಸ್ತ್ರಗಳ ವಿತರಣೆ, ಕಾಲೇಜಿನಲ್ಲಿ ಮದ್ಯಾಹ್ನದ ಗಂಜಿ ಊಟದ ವ್ಯವಸ್ಥೆ ಮಾಡಿಕೊಂು ಬಂದಿರುವುದನ್ನು ಶ್ಲಾಘಿಸಿದರು.
ಸಂಸ್ಥೆಯ ಅಧ್ಯಕ್ಷ ಶೇಖರ್ ಕೆ. ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಿಯಾಝ್ ಪಳ್ಳಿ ವಂದಿಸಿದರು. ತಿಲಕ್‌ರಾಜ್ ಸಾಲ್ಯಾನ್ ಫಲಾನುಭವಿ ವಿದ್ಯಾರ್ಥಿಗಳ ಹೆಸರು ವಾಚಿಸಿದರೆ ಗಿರೀಶ್ ಗುಡ್ಡೆಯಂಗಡಿ ಕಾರ್ಯಕ್ರಮ ನಿರ್ವಹಿಸಿದರು.








