ಅನ್ಯಾಯಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕರಿಗೆ ಮೊದಲು ನ್ಯಾಯ ಕೊಡಿಸಲಿ: ಅಶ್ವತ್ಥ ನಾರಾಯಣ

ಬೆಂಗಳೂರು, ಆ. 2: `ಕಾಂಗ್ರೆಸ್ ಪಕ್ಷದ ಮುಖಂಡರು ಅನ್ಯಾಯಕ್ಕೆ ಒಳಗಾಗಿರುವ ತಮ್ಮ ಪಕ್ಷದ ನಾಯಕರಿಗೆ ನ್ಯಾಯ ದೊರಕಿಸಿಕೊಟ್ಟು ಆ ಬಳಿಕ ಬಿಜೆಪಿ ಅಥವಾ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಮಾತನಾಡಲಿ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಇಂದಿಲ್ಲಿ ತಿರುಗೇಟು ನೀಡಿದ್ದಾರೆ.
ಸೋಮವಾರ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ವೈದ್ಯಕೀಯ ಉಪಕರಣ ಖರೀದಿ ಸಂಬಂಧ ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಗೆ ಬರದ ಕಾಂಗ್ರೆಸ್ ನಾಯಕರು ಇದೀಗ ಯಡಿಯೂರಪ್ಪ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸುತ್ತಿದ್ದಾರೆ' ಎಂದು ಲೇವಡಿ ಮಾಡಿದರು.
ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರನ್ನ ಕೆಳಗಿಳಿಸಿದ್ದು ಏಕೆ? ಅಂಬರೀಶ್ ರಾಜೀನಾಮೆ ನೀಡಿದ್ದು ನಮಗೆ ಗೊತ್ತು. ಜನಾರ್ಧನ ಪೂಜಾರಿ ಅವರನ್ನು ಹೇಗೆ ನಡೆಸಿಕೊಂಡಿದ್ದಾರೆಂದು ನೋಡಿದ್ದೇವೆ. ವಿ.ಶ್ರೀನಿವಾಸ್ ಪ್ರಸಾದ್, ಡಾ.ಜಿ.ಪರಮೇಶ್ವರ್ ಹಾಗೂ ಡಿ.ಜಿ.ಹಳ್ಳಿ, ಕೆಜಿ ಹಳ್ಳಿ ಗಲಭೆ ವಿಚಾರದಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಹೇಗೆ ನಡೆಸಿಕೊಂಡಿದ್ದಾರೆಂದು ನಮಗೆ ಗೊತ್ತಿದೆ ಎಂದು ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡಿದ್ದು, ಪ್ರಾಮಾಣಿಕ ವ್ಯಕ್ತಿ. ಎರಡು ವರ್ಷ ರಾಜ್ಯದ ಗೃಹ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಪ್ರತಿಪಕ್ಷವಾಗಿ ಕಾಂಗ್ರೆಸ್ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತಿನಿತ್ಯ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ ಅವರು, ಬಿಎಸ್‍ವೈ ಅವರನ್ನ ಬಲವಂತವಾಗಿ ಕೆಳಗಿಳಿಸಿಲ್ಲ. 75 ವರ್ಷವಾದವರಿಗೆ ಅಧಿಕಾರವಿಲ್ಲ. ಇದು ನಮ್ಮ ಪಕ್ಷದ ಸಿದ್ಧಾಂತ. ಬಿಎಸ್‍ವೈ ಅವರಾಗಿಯೇ ರಾಜೀನಾಮೆ ಕೊಟ್ಟಿದ್ದಾರೆಂದು ಸ್ಪಷ್ಟಪಡಿಸಿದರು.
ಕೇರಳ ವಿಧಾನಸಭಾ ಚುನಾವಣೆ ಬೇರೆ. ಕರ್ನಾಟಕ ರಾಜ್ಯದಲ್ಲಿನ ಸಂದರ್ಭವೇ ಬೇರೆ. ಕೆಲವು ಸಂದರ್ಭಗಳಲ್ಲಿ ಆ ರೀತಿ ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಕಾಂಗ್ರೆಸ್ ಮುಖಂಡರು ಸುಖಾ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಪ್ರತಿನಿತ್ಯ ದೂರುವುದನ್ನು ಬಿಟ್ಟು ಜವಾಬ್ದಾರಿಯುತ ವಿಪಕ್ಷವಾಗಿ ಕೆಲಸ ಮಾಡಲಿ ಎಂದು ಅಶ್ವತ್ಥ ನಾರಾಯಣ ಸಲಹೆ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.







