ನನ್ನ ಹೊಣೆಗಾರಿಕೆ ಹೆಚ್ಚಿದೆ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ

ಬೆಂಗಳೂರು, ಆ.7: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಕಾರ್ಯನಿರ್ವಹಿಸುವ ಅವಕಾಶ ದೊರೆತಿರುವುದು ಅತ್ಯಂತ ಸಂತಸ ಹಾಗೂ ಧನ್ಯತಾಭಾವ ತಂದಿದೆ. ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವನಾಗಿ ಕೆಲಸ ಮಾಡಿ ರಾಜ್ಯದಲ್ಲಿ ನಗರಗಳ ಅಭಿವೃದ್ಧಿ ಮಾಡುವ ಮಹತ್ವದ ಜವಾಬ್ದಾರಿ ದೊರಕಿತ್ತು. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ನನಗಿದೆ. ಈಗ ನನಗೆ ಮತ್ತೆ ನಗರಾಭಿವೃದ್ಧಿ ಇಲಾಖೆ ನೀಡಿದ್ದು, ಅದು ನನ್ನ ಹೊಣೆಗಾರಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಚಿವ ಬಿ.ಎ.ಬಸವರಾಜ ತಿಳಿಸಿದ್ದಾರೆ.
ನನ್ನ ಕಾರ್ಯಕ್ಷಮತೆಯನ್ನು ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಎಲ್ಲ ಪಕ್ಷದ ಎಲ್ಲಾ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಈ ಅವಕಾಶವನ್ನು ಬಳಸಿಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಮಹಾನಗರಗಳ ಸುಸ್ಥಿರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುವ ಧ್ಯೇಯ ಹೊಂದಿರುತ್ತೇನೆ. ನನ್ನ ಮತಕ್ಷೇತ್ರ ಕೆ.ಆರ್.ಪುರದಲ್ಲಿ ಸಾರ್ವಜನಿಕರ ಆಶಯಗಳಿಗೆ ಕುಂದು ಬರದಂತೆ ಸರಕಾರದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುತ್ತ ಸುಧಾರಣೆ ತರುವ ಗುರಿ ಮತ್ತು ಆಶಯದೊಂದಿಗೆ ಕಾರ್ಯನಿರ್ವಹಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಅತ್ಮನಿರ್ಭರ ಭಾರತ ನಿರ್ಮಿಸುವ ನಿಟ್ಟಿನಲ್ಲಿ ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







