ಆ.14ರಂದು ಉದ್ಯೋಗದ ಹಕ್ಕಿಗಾಗಿ ರಾಜ್ಯಾದ್ಯಂತ ಪ್ರತಿಭಟನೆ: ಡಿವೈಎಫ್‌ಐ

ಮಂಗಳೂರು, ಆ.11: ಸರಕಾರಗಳು ರೂಪಿಸುತ್ತಿರುವ ನೀತಿಗಳು, ಆಡಳಿತದ ವೈಫಲ್ಯಗಳಿಂದಾಗಿ ನಿರುದ್ಯೋಗ ದರ ಹೆಚ್ಚುತ್ತಿದೆ. ಇದರಿಂದ ಅರ್ಹತೆಗೆ ಯೋಗ್ಯವಾದ ಉದ್ಯೋಗ, ಬದುಕಿನ ಭದ್ರತೆಗೆ ಬೇಕಾದ ಆದಾಯ ಇಲ್ಲದೆ ಯುವಜನತೆ ಹತಾಶರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಡಿವೈಎಫ್‌ಐ ರಾಜ್ಯ ಸಮಿತಿ ಉದ್ಯೋಗದ ಹಕ್ಕಿಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.
‘ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಿ’ ಎಂಬ ಘೋಷಣೆಯಡಿ ಉದ್ಯೋಗ ಸೃಷ್ಟಿ, ಹಾಗೂ ಸರೋಜಿನಿ ಮಹಿಷಿ ವರದಿಯ ಜಾರಿ ಗಾಗಿ ದೀರ್ಘಕಾಲೀನ ಹೋರಾಟ ನಡೆಸಲು ನಿರ್ಧರಿಸಿದೆ. ಇದರ ಭಾಗವಾಗಿ ಆ.14ರಂದು ರಾಜ್ಯಾದ್ಯಂತ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಧರಣಿ ನಡೆಸಲು ನಿರ್ಧರಿಸಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಕಾರ್ಯದರ್ಶಿ ಬಸವರಾಜ ಪೂಜಾರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 20.70 ಲಕ್ಷ ಉದ್ಯೋಗಗಳು ಭರ್ತಿಯಾಗದೆ ಖಾಲಿ ಬಿದ್ದಿವೆ. ಖಾಸಗಿ ಉದ್ಯಮಗಳು ಕಾರ್ಮಿಕರನ್ನು ಬಳಸಿ ಬಿಸಾಕುವ ನೀತಿ ಅನುಸರಿಸುತ್ತಿವೆ. ಗುತ್ತಿಗೆ ಪದ್ಧತಿಗಳು ಜೀತಪದ್ಧತಿಯ ಹೊಸ ರೂಪದಂತೆ ಮಾರ್ಪಾಡಾಗಿದೆ. ಜೀವನ ನಿರ್ವಹಣೆಗೆ ಬೇಕಾದ ವೇತನ, ಉದ್ಯೋಗ ಭದ್ರತೆ ಇಲ್ಲದೆ ಅಮಾನವೀಯ ದುಡಿಮೆಗೆ ಸಾಕ್ಷಿಯಾಗಿದೆ.
ಕಿರು ಉದ್ಯಮಗಳು ಸರಕಾರದ ನೀತಿಗಳಿಂದ ಮುಚ್ಚಲ್ಪಡುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸಬಲ್ಲ ಉದ್ಯಮ, ಕೈಗಾರಿಕೆಗಳ ಸ್ಥಾಪನೆಯ ಕಣ್ಣೋಟ ಸರಕಾರಗಳಲ್ಲಿ ಇಲ್ಲವೇ ಇಲ್ಲ ಎಂಬಂತಾಗಿದೆ. ರಾಜ್ಯದ ಕೈಗಾರಿಕಾ ಕೇಂದ್ರಗಳಲ್ಲಿ ನೇಮಕಾತಿಯ ಸಂದರ್ಭ ಸ್ಥಳೀಯರನ್ನು ಪೂರ್ಣವಾಗಿ ಕಡೆಗಣಿಸಿ ಹೊರಗಿನವರಿಗೆ ಮಣಿಹಾಕಲಾಗುತ್ತಿದೆ. ಈ ಬಗ್ಗೆ ಸರಕಾರಗಳು ಎಚ್ಚೆತ್ತು ಕೊಳ್ಳಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಕಾರ್ಯದರ್ಶಿ ಬಸವರಾಜ ಪೂಜಾರ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







