ಕರ್ನಾಟಕ ಮಾಧ್ಯಮ ಅಕಾಡಮಿಗೆ ಅನುದಾನ ಬಿಡುಗಡೆಗೆ ಸಿಎಂ ಭರವಸೆ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡಮಿಯ ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭರವಸೆ ನೀಡಿದ್ದಾರೆ.
ಮಾಧ್ಯಮ ಅಕಾಡಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿತು.
ಮಾಧ್ಯಮ ಅಕಾಡೆಮಿ ಸ್ಥಾಪನೆಯಾಗಿ ನಲವತ್ತು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಕಾಡೆಮಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅನುದಾನದ ಅಗತ್ಯವಿದೆ ಎಂದು ನಿಯೋಗ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನುದಾನ ಬಿಡುಗಡೆ ಮತ್ತು ಪತ್ರಕರ್ತರಿಗೆ ಪ್ರಶಸ್ತಿ ನೀಡಲು ದಿನಾಂಕ ನಿಗದಿಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್.ಹರ್ಷ ಅವರಿಗೆ ಸೂಚಿಸಿದರು.
ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳದ ಕುರಿತಂತೆ ವ್ಯಾಜ್ಯವನ್ನು ಇತ್ಯರ್ಥಗೊಳಿಸಲು ಬೆಂಗಳೂರು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಅಕಾಡಮಿ ಸದಸ್ಯ ಶಿವಾನಂದ್ ತಗಡೂರು, ಅಕಾಡಮಿ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.





