9ರಿಂದ 12ನೇ ತರಗತಿ ಪುನರಾರಂಭಕ್ಕೆ ಶಿಕ್ಷಣ ಇಲಾಖೆಯಿಂದ ಸಂಪೂರ್ಣ ಸಿದ್ಧತೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು, ಆ.21: ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದುವರೆ ವರ್ಷದಿಂದ ಸ್ಥಗಿತಗೊಂಡಿದ್ದ 9, 10ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿ.ಯು ಭೌತಿಕ ತರಗತಿಗಳು ಆ.23ರಿಂದ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದನೇ ತರಗತಿಯಿಂದ ದ್ವಿತೀಯ ಪಿಯುವರೆಗಿನ ಶಿಕ್ಷಣವೂ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟ. ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ. ಆದರೆ, ಕೋವಿಡ್ ಕಾರಣ ಒಂದುವರೆ ವರ್ಷದ ಶೈಕ್ಷಣಿಕ ಅವಧಿಯನ್ನು ಮಕ್ಕಳು ಕಳೆದುಕೊಂಡಿರುವುದು ಬಹಳ ಬೇಸರವಾಗಿದೆ ಎಂದರೆ.
ಈಗ ಕೋವಿಡ್ ಸುರಕ್ಷತಾ ಕ್ರಮಗಳು, ತ್ವರಿತಗತಿಯ ಲಸಿಕಾಕರಣ, ನಾಗರಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರುವ ಕಾರಣ ಕೋವಿಡ್ ಭೀತಿ ಕಡಿಮೆಯಾಗಿದೆ. ಹೀಗಾಗಿ ಮೊದಲ ಹಂತವಾಗಿ 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಆ.23ರಿಂದ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತರಗತಿ ನಡೆಸಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
►ಕೋವಿಡ್ ಸೋಂಕು ದೃಢ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ.
►ವಿದ್ಯಾರ್ಥಿಗಳು ಊಟದ ಬಾಕ್ಸ್, ಬಾಟಲಿಯಲ್ಲಿ ಬಿಸಿ ನೀರು ತೆಗೆದುಕೊಂಡು ಹೋಗಬಹುದು.
►ಶಾಲೆಯಲ್ಲೂ ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ.
►ಕೋವಿಡ್-19 `ಪ್ರಮಾಣಿತ ಕಾರ್ಯಾಚರಣೆ ವಿಧಾನ'ಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಶಾಲಾ, ಕಾಲೇಜುಗಳನ್ನು ಆರಂಭಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
►ಜವಾಬ್ದಾರಿಯೊಂದಿಗೆ ಮಕ್ಕಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾಸ್ಕ್ ಧರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.







