ಉಡುಪಿ: 23ಕ್ಕೆ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ
ಉಡುಪಿ, ಆ.21: ಆ.23ರಂದು ಉಡುಪಿಯ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಯೋಜಿಸಲಾಗುತ್ತಿದ್ದು, ಕನ್ನಡ ಮತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ ಕೋವಿಡ್ ಮಾರ್ಗಸೂಚಿಯನ್ವಯ ಆ.23ರಂದು ಬೆಳಗ್ಗೆ 9:30ಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರಲ್ಲಿ ನಾರಾಯಣ ಗುರುಗಳ ತತ್ವ ಆದರ್ಶಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ಆಯೋಜಿಸಲಾಗು ವುದು ಎಂದರು.
ಕೋವಿಡ್ ಹರಡುವುದನ್ನು ತಡೆಯಲು ಈಗಾಗಲೇ ಹಲವು ನಿರ್ಭಂಧ ಗಳಿದ್ದು, ಯಾವುದೇ ಮೆರವಣಿಗೆ ಮಾಡಲು ಅವಕಾಶವಿಲ್ಲ. ಆದರೆ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಯಾವುದೇ ನಿರ್ಭಂದಗಳಿಲ್ಲ. ಆದ್ದರಿಂದ ನಾರಾಯಣ ಗುರುಗಳ ಪೂಜಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಬಿಲ್ಲವ ಸಂಘಗಳಲ್ಲಿ ಆಚರಿಸಬಹುದಾಗಿದೆ. ಆದರೆ ಕೋವಿಡ್ ನಿಯಮ ಪಾಲನೆ ಯೊಂದಿಗೆ ಜಯಂತಿಯನ್ನು ಆಚರಿಸಬೇಕು ಎಂದು ಜಿ.ಜಗದೀಶ್ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಬಿಲ್ಲವ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.