ರಾಜ್ಯದಲ್ಲಿ ಆ.27ರವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಆ.25: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಆ.27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಚದುರಿದಂತೆ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ ಹಾಗೂ ಜುಲೈ ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರೀ ವರ್ಷಧಾರೆಯಾಗಿತ್ತು. ಜುಲೈ ತಿಂಗಳಲ್ಲಿ ಬಿದ್ದ ಮಳೆಯ ವೇಳೆ ನದಿ, ಹಳ್ಳಕೊಳ್ಳ, ಕೆರೆಗಳು ಉಕ್ಕಿ ಹರಿದಿದ್ದವು. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ ಮೊದಲ ವಾರದಲ್ಲಿಯೂ ಕರಾವಳಿ, ಮಳೆನಾಡು ಭಾಗಗಳಲ್ಲಿ ಮಳೆಯಾಗಿತ್ತು. ನಂತರ ಅಬ್ಬರ ಕಡಿಮೆಯಾಗಿತ್ತು.
ಆದರೆ, ಕಳೆದ ವಾರ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಮುಂಗಾರು ಮಳೆ ಚುರುಕುಗೊಂಡಿದೆ. ಹಲವೆಡೆ ಚದುರಿದಂತೆ ಧಾರಾಕಾರ, ಹಗುರ ಮಳೆಯಾಗುತ್ತಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





