ಸೆ.1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆ.27: ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ದಿಲ್ಲಿ ಭೇಟಿಯ ಮುಖ್ಯ ಉದ್ದೇಶ ಹೆಚ್ಚುವರಿ ಲಸಿಕೆ ಪಡೆಯುವುದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಅವರ ಭರವಸೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ದಿಲ್ಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮೇಕೆದಾಟು, ಮಹಾದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಜೊತೆಗೆ ಸುಪ್ರೀಂ ಕೋರ್ಟ್ ಜಲವಿವಾದಗಳ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಕಾನೂನು ತಜ್ಞರು ಹಾಗೂ ತಾಂತ್ರಿಕ ತಂಡದವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿ.ಎಸ್.ಟಿ. ಪರಿಹಾರ 2022ಕ್ಕೆ ಅಂತ್ಯಗೊಳ್ಳಲಿದ್ದು, ಇದನ್ನು ಮುಂದುವರೆಸುವಂತೆ ಮನವಿ ಮಾಡಲಾಯಿತು. ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮಟ್ಟದ ಕಂಪೆನಿಗಳ ಜೊತೆ ಸಂಪರ್ಕ ಒದಗಿಸುವುದಾಗಿ ತಿಳಿಸಿದ್ದಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನನಗೇ ನೇರವಾಗಿ ವರದಿ ಮಾಡಿ ಎಂದು ತಿಳಿಸಿದ್ದೇನೆ. ಡಿಜಿಪಿ ಅವರು ಇಂದು ಸ್ವತಃ ಮೈಸೂರಿಗೆ ಭೇಟಿ ನೀಡಿದ್ದಾರೆ. ಡಿಜಿಪಿ ಅವರೇ ಖುದ್ದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸುವಂತೆ ತಿಳಿಸಿದ್ದೇನೆ. ಶೀಘ್ರದಲ್ಲೇ ಪ್ರಕರಣ ಭೇದಿಸುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ನುಡಿದರು.
ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆಗಸ್ಟ್ 30 ರಂದು ನಡೆಯಲಿರುವ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಚಿವ ಸಂಪುಟದಲ್ಲಿನ ಖಾಲಿ ಸ್ಥಾನ ಭರ್ತಿ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬೇರೆ ಬೇರೆ ಕಾರಣಗಳಿಂದ ಭೇಟಿ ಮಾಡಲು ಆಗಲಿಲ್ಲ. ಮುಂದಿನ ಬಾರಿ ಹೊಸದಿಲ್ಲಿಗೆ ತೆರಳಿದಾಗ ಆ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದರು.







