1,242 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ
ಬೆಂಗಳೂರು, ಆ. 28: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ(ಕಾಲೇಜು ಶಿಕ್ಷಣ) ಅಧೀನ ಕಾರ್ಯದರ್ಶಿ ಎಸ್.ಹರ್ಷ ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ.
ನಿಯಮಾನುಸಾರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ ಮತ್ತು ರೋಸ್ಟರ್ ಬಿಂದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸದ್ಯದಲ್ಲೇ ಅರ್ಜಿಯನ್ನು ಆಹ್ವಾನಿಸಲಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಮಾಡುವ ಸಂಬಂಧ 2015ರಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನೊಳಗೊಂಡಂತೆ ಪ್ರಸ್ತುತ ಭರ್ತಿ ಮಾಡಬೇಕಾಗಿರುವ 1,097 ಹುದ್ದೆಗಳು ಸೇರಿ ಒಟ್ಟು 1,242 ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ವಿಶೇಷ ನೇಮಕಾತಿ ನಿಯಮಗಳನ್ವಯ ಭರ್ತಿ ಮಾಡುವ ಸಲುವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ಸರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಮಾಡಿ ಅಧಿಸೂಚಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ 57,700 ರೂ.ಗಳಿಂದ 1,82,400 ರೂ.ಗಳು. ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಒಟ್ಟು 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ.95ರಷ್ಟು ನೇರ ನೇಮಕಾತಿ ಮೂಲಕ ಹಾಗೂ ಶೇ.5ರಷ್ಟು ಇಲಾಖೆಯ ಗ್ರೂಪ್ `ಸಿ' ವೃಂದಕ್ಕೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.







