ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ: ಕೂರ್ಮಾ ರಾವ್
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ಕೂರ್ಮಾ ರಾವ್
ಉಡುಪಿ, ಸೆ.1: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮಾ ರಾವ್ ಎಂ. ಇಂದು ಅಧಿಕಾರ ಸ್ವೀಕರಿಸಿದರು. ಕಂಪ್ಯೂಟರ್ ಸೈನ್ಸ್ನಲ್ಲಿ ಬಿ.ಟೆಕ್. ಪದವಿ ಪಡೆದಿರುವ ಇವರು, 2011 ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ. 2018 ರಿಂದ 2020 ರವರೆಗೆ 2 ವರ್ಷ 1 ತಿಂಗಳು ಯಾದಗಿರಿ ಜಿಲ್ಲಾಧಿಕಾರಿಯಾಗಿ ಹಾಗೂ 2020ರಿಂದ 2021ರವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂ.ಡಿ. ಯಾಗಿ ಕಾರ್ಯನಿರ್ವಹಿಸಿದ್ದಾರೆ.
ಜಿಲ್ಲೆಯಾದ್ಯಂತ ಪ್ರವಾಸ: ಅಧಿಕಾರ ಸ್ವೀಕರಿಸಿದ ಬಳಿಕ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಲಾಗುವುದು ಮತ್ತು ಜಿಲ್ಲೆಯಲ್ಲಿ ಹೆಚ್ಚು ಪ್ರವಾಸ ಮಾಡವುದರೊಂದಿಗೆ ಕೆಳ ಹಂತದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವರುಗಳ ಅವಶ್ಯಕತೆಗಳನ್ನು ಅರಿತು ಅವುಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.
ಉಡುಪಿ ಜಿಯಲ್ಲಿ ವಿಕೇಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದರ ಪಾಲನೆ ಬಗ್ಗೆ ಎಲ್ಲರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲೆಯಲ್ಲಿ ಕೊರೋನ ಸವಾಲು ಎದುರಿಸಲು ಜನರ ಭಾವನೆಗಳು, ಜನಪ್ರತಿನಿಧಿಗಳ ಅಭಿಪ್ರಾಯ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.





